ಗಲಾತ್ಯದವರಿಗೆ 3 : 1 (ERVKN)
ನಂಬಿಕೆಯ ಮೂಲಕ ದೇವರಾಶೀರ್ವಾದ ಯೇಸು ಕ್ರಿಸ್ತನು ಶಿಲುಬೆಯ ಮೇಲೆ ಮರಣ ಹೊಂದಿದ್ದರ ಬಗ್ಗೆ ಗಲಾತ್ಯದಲ್ಲಿರುವ ನಿಮಗೆ ಬಹು ಸ್ಪಷ್ಟವಾಗಿ ತಿಳಿಸಲಾಯಿತು. ಆದರೆ ನೀವು ಬಹು ಬುದ್ಧಿಹೀನರಾಗಿದ್ದೀರಿ. ನಿಮ್ಮನ್ನು ಮೋಸಗೊಳಿಸಲು ಬೇರೊಬ್ಬನಿಗೆ ಅವಕಾಶ ಮಾಡಿಕೊಟ್ಟಿರಿ.
ಗಲಾತ್ಯದವರಿಗೆ 3 : 2 (ERVKN)
ಈ ವಿಷಯವೊಂದನ್ನು ನನಗೆ ತಿಳಿಸಿರಿ: ನೀವು ಪವಿತ್ರಾತ್ಮನನ್ನು ಹೊಂದಿಕೊಂಡದ್ದು ಹೇಗೆ? ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದ ಹೊಂದಿಕೊಂಡಿರೊ? ಇಲ್ಲ! ಸುವಾರ್ತೆಯನ್ನು ಕೇಳಿ ಅದರಲ್ಲಿ ನಂಬಿಕೆಯಿಟ್ಟದ್ದರಿಂದಲೇ ಪವಿತ್ರಾತ್ಮನನ್ನು ಹೊಂದಿಕೊಂಡಿರಿ.
ಗಲಾತ್ಯದವರಿಗೆ 3 : 3 (ERVKN)
ಕ್ರಿಸ್ತನಲ್ಲಿಯ ನಿಮ್ಮ ಜೀವಿತವನ್ನು ಪವಿತ್ರಾತ್ಮನೊಂದಿಗೆ ಆರಂಭಿಸಿದಿರಿ. ಈಗ ಅದನ್ನು ನಿಮ್ಮ ಸ್ವಂತ ಶಕ್ತಿಯೊಂದಿಗೆ ಮುಂದುವರಿಸಲು ಪ್ರಯತ್ನಿಸುತ್ತೀರೋ? ಅದು ಬುದ್ಧಿಹೀನತೆ!
ಗಲಾತ್ಯದವರಿಗೆ 3 : 4 (ERVKN)
ಅನೇಕ ಸಂಗತಿಗಳನ್ನು ಅನುಭವದಿಂದ ತಿಳಿದುಕೊಂಡಿದ್ದೀರಿ. ಆ ಅನುಭವಗಳೆಲ್ಲಾ ವ್ಯರ್ಥಗೊಂಡವೇ?
ಗಲಾತ್ಯದವರಿಗೆ 3 : 5 (ERVKN)
ದೇವರು ಪವಿತ್ರಾತ್ಮನನ್ನು ಕೊಡುವುದು ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ? ದೇವರು ಮಹತ್ಕಾರ್ಯಗಳನ್ನು ಮಾಡುವುದು ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ? ಇಲ್ಲ! ಸುವಾರ್ತೆಯನ್ನು ಕೇಳಿ ಅದನ್ನು ನಂಬಿಕೊಂಡದ್ದರಿಂದ ದೇವರು ನಿಮಗೆ ಪವಿತ್ರಾತ್ಮನನ್ನು ಕೊಡುತ್ತಾನೆ ಮತ್ತು ಮಹತ್ಕಾರ್ಯಗಳನ್ನು ಮಾಡುತ್ತಾನೆ.
ಗಲಾತ್ಯದವರಿಗೆ 3 : 6 (ERVKN)
ಪವಿತ್ರ ಗ್ರಂಥವು ಅಬ್ರಹಾಮನ ವಿಷಯವಾಗಿಯೂ ಇದನ್ನೇ ಹೇಳುತ್ತದೆ. “ಅಬ್ರಹಾಮನು ದೇವರನ್ನು ನಂಬಿದನು. ದೇವರು ಅವನ ನಂಬಿಕೆಯನ್ನು ಪರಿಗಣಿಸಿದ್ದರಿಂದ ನೀತಿವಂತನೆಂಬ ನಿರ್ಣಯ ಅವನಿಗೆ ದೊರೆಯಿತು.” ಉಲ್ಲೇಖನ: ಆದಿಕಾಂಡ 15:6.
ಗಲಾತ್ಯದವರಿಗೆ 3 : 7 (ERVKN)
ಆದ್ದರಿಂದ ನಂಬಿಕೆಯನ್ನು ಹೊಂದಿರುವ ಜನರೇ ಅಬ್ರಹಾಮನ “ನಿಜಮಕ್ಕಳು” ಎಂಬುದು ನಿಮಗೆ ತಿಳಿದಿರಬೇಕು.
ಗಲಾತ್ಯದವರಿಗೆ 3 : 8 (ERVKN)
ದೇವರು ಯೆಹೂದ್ಯರಲ್ಲದವರನ್ನು ಅವರ ನಂಬಿಕೆಯ ಮೂಲಕ ನೀತಿವಂತರನ್ನಾಗಿ ಮಾಡುತ್ತಾನೆ. “ಅಬ್ರಹಾಮನೇ, ನಿನ್ನ ಮೂಲಕ ದೇವರು ಭೂಮಿಯ ಮೇಲಿರುವ ಜನರನ್ನೆಲ್ಲ ಆಶೀರ್ವದಿಸುತ್ತಾನೆ” ಉಲ್ಲೇಖನ: ಆದಿಕಾಂಡ 12:3. ಎಂಬ ಸುವಾರ್ತೆಯನ್ನು ಅವನಿಗೆ ಮೊದಲೇ ತಿಳಿಸಲಾಯಿತೆಂದು ಪವಿತ್ರ ಗ್ರಂಥವು ಹೇಳುತ್ತದೆ.
ಗಲಾತ್ಯದವರಿಗೆ 3 : 9 (ERVKN)
ಅವನು ಇದನ್ನು ನಂಬಿದ್ದರಿಂದಲೇ ಆಶೀರ್ವಾದ ಹೊಂದಿದನು. ಇದೇ ನಿಯಮ ಇಂದಿಗೂ ಅನ್ವಯಿಸುತ್ತದೆ. ಅವನು ಆಶೀರ್ವಾದ ಹೊಂದಿದಂತೆಯೇ ನಂಬಿಕೆಯಿಡುವ ಜನರೆಲ್ಲರೂ ಆಶೀರ್ವಾದ ಹೊಂದುವರು.
ಗಲಾತ್ಯದವರಿಗೆ 3 : 10 (ERVKN)
ಆದರೆ ನೀತಿವಂತರಾಗಲು ಧರ್ಮಶಾಸ್ತ್ರವನ್ನು ಅವಲಂಬಿಸಿಕೊಂಡಿರುವವರು ಶಾಪಗ್ರಸ್ತರಾಗಿದ್ದಾರೆ. ಏಕೆಂದರೆ ಪವಿತ್ರ ಗ್ರಂಥವು ಹೇಳುವಂತೆ, “ಧರ್ಮಶಾಸ್ತ್ರದಲ್ಲಿ ಬರೆದಿರುವ ನಿಯಮಗಳನ್ನೆಲ್ಲಾ ಕೈಕೊಂಡು ನಡೆಯಬೇಕು. ಅವುಗಳಿಗೆ ಎಂದಾದರೂ ಅವಿಧೇಯನಾದವನು ಶಾಪಗ್ರಸ್ತನಾಗಿದ್ದಾನೆ.” ಉಲ್ಲೇಖನ: ಧರ್ಮೋಪದೇಶ. 27:26.
ಗಲಾತ್ಯದವರಿಗೆ 3 : 11 (ERVKN)
ಆದ್ದರಿಂದ ಧರ್ಮಶಾಸ್ತ್ರದ ಮೂಲಕ ಯಾವನೂ ನೀತಿವಂತನಾಗಲು ಸಾಧ್ಯವಿಲ್ಲ ಎಂಬುದು ಸ್ಪಷ್ಟವಾಗಿದೆ. ಪವಿತ್ರ ಗ್ರಂಥವು ಹೇಳುವಂತೆ, “ನಂಬಿಕೆಯ ಮೂಲಕ ನೀತಿವಂತನಾದವನು ಸದಾಕಾಲ ಜೀವಿಸುವನು.” [✡ಉಲ್ಲೇಖನ: ಹಬಕ್ಕೂಕ 2:4; ರೋಮ್‌ನಗರದವರಿಗೆ 1:17.]
ಗಲಾತ್ಯದವರಿಗೆ 3 : 12 (ERVKN)
ಧರ್ಮಶಾಸ್ತ್ರವು ನಂಬಿಕೆಯ ಮಾರ್ಗವನ್ನು ಬಳಸದೆ, “ಈ ವಿಧಿನಿಯಮಗಳನ್ನು ಪಾಲಿಸುವವನು ಅವುಗಳ ಮೂಲಕ ಜೀವವನ್ನು ಪಡೆದುಕೊಳ್ಳುತ್ತಾನೆ” ಎಂದು ಹೇಳುತ್ತದೆ.
ಗಲಾತ್ಯದವರಿಗೆ 3 : 13 (ERVKN)
ಧರ್ಮಶಾಸ್ತ್ರವು ನಮ್ಮ ಮೇಲೆ ಶಾಪವನ್ನು ಬರಮಾಡುತ್ತದೆ. ಆದರೆ ಕ್ರಿಸ್ತನು ಆ ಶಾಪವನ್ನು ತನ್ನ ಮೇಲೆ ತೆಗೆದುಕೊಂಡನು. ಆತನು ನಮ್ಮ ಸ್ಥಾನವನ್ನು ತಾನೇ ತೆಗೆದುಕೊಂಡನು. ಕ್ರಿಸ್ತನು ತನ್ನನ್ನೇ ಶಾಪಕ್ಕೆ ಒಳಪಡಿಸಿಕೊಂಡನು. ಪವಿತ್ರ ಗ್ರಂಥದಲ್ಲಿ ಬರೆದಿರುವಂತೆ, “ಮರಕ್ಕೆ ತೂಗುಹಾಕಲ್ಪಟ್ಟ ವ್ಯಕ್ತಿಯು ಶಾಪಗ್ರಸ್ತನಾಗಿದ್ದಾನೆ.” ಉಲ್ಲೇಖನ: ಧರ್ಮೋಪದೇಶ. 21:22-23.
ಗಲಾತ್ಯದವರಿಗೆ 3 : 14 (ERVKN)
ಎಲ್ಲಾ ಜನರಿಗೆ ದೇವರ ಆಶೀರ್ವಾದವು ದೊರೆಯಲೆಂದು ಕ್ರಿಸ್ತನು ಹೀಗೆ ಮಾಡಿದನು. ಈ ಆಶೀರ್ವಾದವನ್ನು ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ್ದನು. ಈ ಆಶೀರ್ವಾದವು ಯೇಸು ಕ್ರಿಸ್ತನ ಮೂಲಕ ಬರುತ್ತದೆ. ದೇವರು ವಾಗ್ದಾನ ಮಾಡಿದ ಪವಿತ್ರಾತ್ಮನನ್ನು ನಾವು ಹೊಂದಿಕೊಳ್ಳಲೆಂದು ಯೇಸು ಮರಣಹೊಂದಿದನು. ನಂಬಿಕೆಯಿಡುವುದರ ಮೂಲಕ ನಾವು ಈ ವಾಗ್ದಾನವನ್ನು ಪಡೆದುಕೊಳ್ಳುತ್ತೇವೆ.
ಗಲಾತ್ಯದವರಿಗೆ 3 : 15 (ERVKN)
ಧರ್ಮಶಾಸ್ತ್ರ ಮತ್ತು ವಾಗ್ದಾನ ಸಹೋದರ ಸಹೋದರಿಯರೇ, ನಾನು ನಿಮಗೊಂದು ಉದಾಹರಣೆಯನ್ನು ಕೊಡುತ್ತೇನೆ. ಒಬ್ಬನು ಇನ್ನೊಬ್ಬನೊಂದಿಗೆ ಮಾಡಿಕೊಳ್ಳುವ ಒಪ್ಪಂದದ ಬಗ್ಗೆ ಯೋಚಿಸಿ. ಆ ಒಪ್ಪಂದವು ಅಧಿಕೃತವಾದಾಗ ಅದನ್ನು ರದ್ದುಮಾಡುವುದಕ್ಕಾಗಲಿ ಅಥವಾ ಅದಕ್ಕೆ ಬೇರೆ ಏನಾದರು ಸೇರಿಸುವುದಕ್ಕಾಗಲಿ ಯಾರಿಗೂ ಸಾಧ್ಯವಿಲ್ಲ.
ಗಲಾತ್ಯದವರಿಗೆ 3 : 16 (ERVKN)
ದೇವರು ಅಬ್ರಹಾಮನಿಗೂ ಅವನ ಸಂತಾನದವರಿಗೂ ವಾಗ್ದಾನಗಳನ್ನು ಮಾಡಿದನು. “ನಿನ್ನ ಸಂತತಿಗಳಿಗೆ” ಎಂದು ದೇವರು ಹೇಳಲಿಲ್ಲ. ಏಕೆಂದರೆ ಅನೇಕ ಜನರು ಎಂಬರ್ಥವನ್ನು ಅದು ಕೊಡುತ್ತದೆ. ಆದರೆ ದೇವರು ಅವನಿಗೆ, “ನಿನ್ನ ಸಂತತಿಗೆ” *ನಿನ್ನ ಸಂತತಿಗೆ ನೋಡಿರಿ: ಆದಿಕಾಂಡ 12:7. ಎಂದು ಹೇಳಿದನು. ಅದರರ್ಥವೇನೆಂದರೆ, ಒಬ್ಬನೇ ಒಬ್ಬ ವ್ಯಕ್ತಿ. ಆತನೇ ಕ್ರಿಸ್ತನು.
ಗಲಾತ್ಯದವರಿಗೆ 3 : 17 (ERVKN)
ನಾನು ಹೇಳುತ್ತಿರುವುದೇನೆಂದರೆ, ದೇವರು ಅಬ್ರಹಾಮನೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡು ಅದನ್ನು ಸ್ಥಿರಪಡಿಸಿದನು. ಆದ್ದರಿಂದ ನಾನೂರಮೂವತ್ತು ವರ್ಷಗಳಾದ ನಂತರ ಬಂದ ಧರ್ಮಶಾಸ್ತ್ರವು ಅಬ್ರಹಾಮನಿಗೆ ದೇವರು ಮಾಡಿದ ವಾಗ್ದಾನವನ್ನು ರದ್ದುಪಡಿಸುವುದೂ ಇಲ್ಲ ಬದಲಾಯಿಸುವುದೂ ಇಲ್ಲ.
ಗಲಾತ್ಯದವರಿಗೆ 3 : 18 (ERVKN)
ದೇವರು ವಾಗ್ದಾನ ಮಾಡಿದಂಥವುಗಳು ಧರ್ಮಶಾಸ್ತ್ರದ ಅನುಸರಣೆಯಿಂದ ದೊರೆಯುತ್ತವೆಯೇ? ಇಲ್ಲ! ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ನಾವು ಅವುಗಳನ್ನು ಪಡೆದುಕೊಳ್ಳಬಹುದಾಗಿದ್ದರೆ ಅವುಗಳನ್ನು ನಮಗೆ ಕೊಡುವಂಥದ್ದು ದೇವರ ವಾಗ್ದಾನವಲ್ಲ. ಆದರೆ ದೇವರು ತಾನು ಮಾಡಿದ ವಾಗ್ದಾನದ ಮೂಲಕ ತನ್ನ ಆಶೀರ್ವಾದಗಳನ್ನು ಅಬ್ರಹಾಮನಿಗೆ ಉಚಿತವಾಗಿ ಕೊಟ್ಟನು.
ಗಲಾತ್ಯದವರಿಗೆ 3 : 19 (ERVKN)
ಹಾಗಾದರೆ ಧರ್ಮಶಾಸ್ತ್ರವಿದ್ದದ್ದು ಯಾಕೆ? ಜನರ ಅಪರಾಧಗಳನ್ನು ತೋರಿಸುವುದಕ್ಕಾಗಿ ಧರ್ಮಶಾಸ್ತ್ರವನ್ನು ಕೊಡಲಾಯಿತು. ಅಬ್ರಹಾಮನ ವಿಶೇಷ ಸಂತಾನವು ಬರುವ ತನಕ ಧರ್ಮಶಾಸ್ತ್ರವಿತ್ತು. ಈ ಸಂತಾನದ (ಕ್ರಿಸ್ತನು) ಬಗ್ಗೆಯೇ ದೇವರು ವಾಗ್ದಾನ ಮಾಡಿದನು. ಧರ್ಮಶಾಸ್ತ್ರವನ್ನು ದೇವದೂತರ ಮೂಲಕ ಕೊಡಲಾಯಿತು. ಜನರಿಗೆ ಧರ್ಮಶಾಸ್ತ್ರವನ್ನು ಕೊಡುವುದಕ್ಕಾಗಿ ದೇವದೂತರು ಮೋಶೆಯನ್ನು ಮಧ್ಯವರ್ತಿಯನ್ನಾಗಿ ಉಪಯೋಗಿಸಿದರು.
ಗಲಾತ್ಯದವರಿಗೆ 3 : 20 (ERVKN)
ಒಂದೇ ಪಕ್ಷವಿದ್ದರೆ ಮಧ್ಯಸ್ತನು ಬೇಕಿಲ್ಲ. ದೇವರು ಒಬ್ಬನೇ.
ಗಲಾತ್ಯದವರಿಗೆ 3 : 21 (ERVKN)
ಮೋಶೆಯ ಧರ್ಮಶಾಸ್ತ್ರದ ಉದ್ದೇಶ ಧರ್ಮಶಾಸ್ತ್ರವು ದೇವರ ವಾಗ್ದಾನಗಳಿಗೆ ವಿರೋಧವಾಗಿದೆ ಎಂಬುದು ಇದರರ್ಥವೇ? ಇಲ್ಲ! ಜೀವವನ್ನು ಕೊಡುವಂಥ ಧರ್ಮಶಾಸ್ತ್ರವಿದ್ದಿದ್ದರೆ ಅದನ್ನು ಅನುಸರಿಸುವುದರ ಮೂಲಕ ನೀತಿವಂತರಾಗಬಹುದಾಗಿತ್ತು.
ಗಲಾತ್ಯದವರಿಗೆ 3 : 22 (ERVKN)
ಆದರೆ ಇದು ಸತ್ಯವಲ್ಲ. ಏಕೆಂದರೆ ಸಮಸ್ತವೂ ಪಾಪಕ್ಕೆ ಒಳಗಾಗಿದೆ ಎಂದು ಪವಿತ್ರ ಗ್ರಂಥ ಪ್ರಕಟಿಸುತ್ತದೆ. ಯೇಸು ಕ್ರಿಸ್ತನಲ್ಲಿ ನಂಬಿಕೆ ಇಡುವವರಿಗೆ ಅವರ ನಂಬಿಕೆಯ ಆಧಾರದ ಮೇಲೆ ವಾಗ್ದಾನದ ಫಲವು ದೊರೆಯಬೇಕೆಂದೇ ಪವಿತ್ರ ಗ್ರಂಥವು ಹೀಗೆ ಪ್ರಕಟಿಸಿದೆ.
ಗಲಾತ್ಯದವರಿಗೆ 3 : 23 (ERVKN)
ಈ ನಂಬಿಕೆಯು ಬರುವುದಕ್ಕಿಂತ ಮೊದಲು ನಾವು ಧರ್ಮಶಾಸ್ತ್ರಕ್ಕೆ ಸೆರೆಯಾಳುಗಳಾಗಿದ್ದೆವು. ಬರಲಿದ್ದ ನಂಬಿಕೆಯ ಮಾರ್ಗವನ್ನು ದೇವರು ನಮಗೆ ತೋರಿಸಿಕೊಡುವ ತನಕ ನಮಗೆ ಸ್ವತಂತ್ರವಿರಲಿಲ್ಲ.
ಗಲಾತ್ಯದವರಿಗೆ 3 : 24 (ERVKN)
ಆದ್ದರಿಂದ ಕ್ರಿಸ್ತನು ಬರುವ ತನಕ ಧರ್ಮಶಾಸ್ತ್ರವು ನಮಗೆ ಯಜಮಾನನಾಗಿತ್ತು. ಕ್ರಿಸ್ತನು ಬಂದ ತರುವಾಯ ನಾವು ನಂಬಿಕೆಯ ಮೂಲಕ ನೀತಿವಂತರಾಗಿರಲು ಸಾಧ್ಯವಾಯಿತು.
ಗಲಾತ್ಯದವರಿಗೆ 3 : 25 (ERVKN)
ಈಗ ನಂಬಿಕೆಯ ಮಾರ್ಗವು ಬಂದಿದೆ. ಆದ್ದರಿಂದ ಈಗ ನಾವು ಧರ್ಮಶಾಸ್ತ್ರದ ಅಧೀನದಲ್ಲಿ ಜೀವಿಸುವುದಿಲ್ಲ.
ಗಲಾತ್ಯದವರಿಗೆ 3 : 26 (ERVKN)
(26-27) ನೀವೆಲ್ಲರೂ ಕ್ರಿಸ್ತನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿದ್ದರಿಂದ ಕ್ರಿಸ್ತನನ್ನೇ ಧರಿಸಿಕೊಂಡಿರಿ. ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಡುವುದರ ಮೂಲಕ ನೀವೆಲ್ಲರೂ ದೇವರ ಮಕ್ಕಳಾಗಿದ್ದೀರೆಂಬುದನ್ನು ಇದು ತೋರಿಸುತ್ತದೆ.
ಗಲಾತ್ಯದವರಿಗೆ 3 : 27 (ERVKN)
ಗಲಾತ್ಯದವರಿಗೆ 3 : 28 (ERVKN)
ಈಗ ಕ್ರಿಸ್ತನಲ್ಲಿ ಯೆಹೂದ್ಯನು, ಗ್ರೀಕನು ಎಂಬ ವ್ಯತ್ಯಾಸವಿಲ್ಲ; ಸ್ವತಂತ್ರರು ಮತ್ತು ಗುಲಾಮರು ಎಂಬ ವ್ಯತ್ಯಾಸವಿಲ್ಲ; ಸ್ತ್ರೀಯರು ಮತ್ತು ಪುರುಷರು ಎಂಬ ವ್ಯತ್ಯಾಸವಿಲ್ಲ. ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿದ್ದೀರಿ.
ಗಲಾತ್ಯದವರಿಗೆ 3 : 29 (ERVKN)
ನೀವು ಕ್ರಿಸ್ತನವರಾಗಿದ್ದೀರಿ. ಆದ್ದರಿಂದ ನೀವು ಅಬ್ರಹಾಮನ ಸಂತಾನದವರು. ದೇವರು ಅವನಿಗೆ ಮಾಡಿದ ವಾಗ್ದಾನದ ಪ್ರಕಾರ ನೀವೆಲ್ಲರೂ ದೇವರ ಆಶೀರ್ವಾದಗಳನ್ನು ಪಡೆದುಕೊಳ್ಳುವಿರಿ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29