ಯೆಶಾಯ 4 : 1 (ERVKN)
ಆ ಸಮಯದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಗಂಡಸನ್ನು ಹಿಡಿದುಕೊಂಡು, “ನಮ್ಮ ಆಹಾರವನ್ನು ನಾವೇ ಸಂಪಾದಿಸಿಕೊಳ್ಳುತ್ತೇವೆ. ನಮ್ಮ ಬಟ್ಟೆಬರೆಗಳನ್ನು ನಾವೇ ಮಾಡಿಕೊಳ್ಳುತ್ತೇವೆ, ನಮ್ಮ ಕೆಲಸಗಳನ್ನೆಲ್ಲಾ ನಾವೇ ಮಾಡಿಕೊಳ್ಳುತ್ತೇವೆ. ನೀನು ನಮ್ಮನ್ನು ಮದುವೆಯಾಗು, ನಿನ್ನ ಹೆಸರನ್ನು ನಾವು ಇಟ್ಟುಕೊಳ್ಳುವಂತೆ ಮಾಡು. ದಯಮಾಡಿ ನಮ್ಮ ನಾಚಿಕೆಯನ್ನು ನಮ್ಮಿಂದ ತೊಲಗಿಸು” ಎಂದು ಹೇಳುವರು.
ಯೆಶಾಯ 4 : 2 (ERVKN)
ಆ ಸಮಯದಲ್ಲಿ ಯೆಹೋವನ ಸಸಿ (ಯೆಹೂದವು) ಬಹಳ ಚಂದವಾಗಿಯೂ ದೊಡ್ಡದಾಗಿಯೂ ಇರುವುದು. ಆ ಸಮಯದಲ್ಲಿ, ಚೀಯೋನಿನಲ್ಲಿ ಮತ್ತು ಜೆರುಸಲೇಮಿನಲ್ಲಿ ಇನ್ನೂ ವಾಸಿಸುತ್ತಿರುವ ಜನರು ತಮ್ಮ ದೇಶದಲ್ಲಿ ಬೆಳೆಯುವ ಫಲಗಳಿಗಾಗಿ ತುಂಬಾ ಹೆಚ್ಚಳಪಡುವರು.
ಯೆಶಾಯ 4 : 3 (ERVKN)
ಜೀವಬಾಧ್ಯರ ಪಟ್ಟಿಯಲ್ಲಿ ಹೆಸರು ಬರೆಯಲ್ಪಟ್ಟು ಚೀಯೋನಿನಲ್ಲಿಯೂ ಜೆರುಸಲೇಮಿನಲ್ಲಿಯೂ ವಾಸಿಸುವವರು ಪರಿಶುದ್ಧರೆಂದು ಕರೆಯಲ್ಪಡುವರು. ಅವರೆಲ್ಲರೂ ಅಲ್ಲಿಯೇ ನೆಲೆಸುವರು.
ಯೆಶಾಯ 4 : 4 (ERVKN)
ಚೀಯೋನಿನ ಸ್ತ್ರೀಯರ ಕಲ್ಮಷವನ್ನು ಯೆಹೋವನು ತೊಳೆದುಬಿಡುವನು. ಆತನು ಜೆರುಸಲೇಮಿನ ಮಧ್ಯದಲ್ಲಿರುವ ರಕ್ತವನ್ನು ತೊಳೆದುಬಿಡುವನು. ಆತನು ನ್ಯಾಯನೀತಿಗಳಿಂದ ತೀರ್ಪುನೀಡುವನು; ದಹಿಸುವ ಆತ್ಮನಿಂದ ಎಲ್ಲವನ್ನು ಶುದ್ಧಗೊಳಿಸುವನು.
ಯೆಶಾಯ 4 : 5 (ERVKN)
ಆ ಸಮಯದಲ್ಲಿ ತಾನು ತನ್ನ ಜನರೊಂದಿಗೆ ಇರುವುದಾಗಿ ಹೀಗೆ ಯೆಹೋವನು ರುಜುವಾತುಪಡಿಸುವನು. ಹಗಲಲ್ಲಿ ಆತನು ಧೂಮಮೇಘವನ್ನೂ ಇರುಳಲ್ಲಿ ಪ್ರಜ್ವಲಿಸುವ ಅಗ್ನಿಯ ಪ್ರಕಾಶವನ್ನೂ ಉಂಟುಮಾಡುವನು. ಈ ಗುರುತುಗಳು ಚೀಯೋನ್ ಪರ್ವತದ ಮೇಲಿರುವ ಪ್ರತಿಯೊಂದು ಜನರ ಸಭೆಯ ಮೇಲೆ ಆಕಾಶದಲ್ಲಿ ಕಾಣುವುದು. ಪ್ರತಿಯೊಬ್ಬನ ಮೇಲೆಯೂ ಕಾಪಾಡಿಕೊಳ್ಳುವುದಕ್ಕಾಗಿ ಹೊದಿಕೆ ಇರುವುದು.
ಯೆಶಾಯ 4 : 6 (ERVKN)
ಈ ಹೊದಿಕೆಯು ಸುರಕ್ಷಿತ ಸ್ಥಳದಂತಿರುವದು. ಅದು ಸೂರ್ಯನ ಶಾಖದಿಂದ ಅವರನ್ನು ರಕ್ಷಿಸುವದು. ಅದೇ ಸಮಯದಲ್ಲಿ ಸಣ್ಣ ದೊಡ್ಡ ಮಳೆಗಳಿಂದಲೂ ಆ ಹೊದಿಕೆಯು ರಕ್ಷಿಸುವದು.

1 2 3 4 5 6