ಲೂಕನು 18 : 1 (ERVKN)
ತನ್ನ ಜನರಿಗೆ ದೇವರ ಉತ್ತರ ನಿರಾಶರಾಗದೆ ಯಾವಾಗಲೂ ಪ್ರಾರ್ಥಿಸಬೇಕೆಂದು ಯೇಸು ತನ್ನ ಶಿಷ್ಯರಿಗೆ ಈ ಸಾಮ್ಯದ ಮೂಲಕ ಉಪದೇಶಿಸಿದನು:
ಲೂಕನು 18 : 2 (ERVKN)
“ಒಂದು ಊರಿನಲ್ಲಿ ಒಬ್ಬ ನ್ಯಾಯಾಧೀಶನಿದ್ದನು. ಅವನಿಗೆ ದೇವರಲ್ಲಿ ಭಯಭಕ್ತಿಯಿರಲಿಲ್ಲ. ಜನರು ತನ್ನ ಬಗ್ಗೆ ಏನು ಯೋಚಿಸುತ್ತಾರೆ ಎಂಬುದರ ಬಗ್ಗೆ ಅವನು ಗಮನ ಕೊಡಲಿಲ್ಲ.
ಲೂಕನು 18 : 3 (ERVKN)
ಅದೇ ಊರಿನಲ್ಲಿ ಒಬ್ಬ ವಿಧವೆಯಿದ್ದಳು. ಆಕೆಯು ಅನೇಕ ಸಲ ನ್ಯಾಯಾಧೀಶನ ಬಳಿಗೆ ಬಂದು, ‘ಇಲ್ಲಿ ನನಗೊಬ್ಬನು ತೊಂದರೆ ಕೊಡುತ್ತಿದ್ದಾನೆ. ದಯವಿಟ್ಟು ನನಗೆ ನ್ಯಾಯವನ್ನು ದೊರಕಿಸಿಕೊಡಿ!’ ಎಂದು ಬೇಡಿಕೊಂಡಳು.
ಲೂಕನು 18 : 4 (ERVKN)
ಆದರೆ ನ್ಯಾಯಾಧೀಶನು ಆ ಸ್ತ್ರೀಗೆ ಸಹಾಯಮಾಡಲು ಬಯಸಲಿಲ್ಲ. ಬಹಳ ಸಮಯದ ನಂತರ ಆ ನ್ಯಾಯಾಧೀಶನು ತನ್ನೊಳಗೆ, ‘ನನಗಂತೂ ದೇವರಲ್ಲಿ ಭಯಭಕ್ತಿಯಿಲ್ಲ. ಜನರು ನನ್ನ ಬಗ್ಗೆ ಏನು ಯೋಚಿಸುತ್ತಾರೆಂಬುದರ ಬಗ್ಗೆಯೂ ಗಮನವಿಲ್ಲ.
ಲೂಕನು 18 : 5 (ERVKN)
ಆದರೆ ಈ ಸ್ತ್ರೀ ಬಂದುಬಂದು ನನ್ನನ್ನು ಕುಗ್ಗಿಸಿಬಿಡುತ್ತಾಳೆ. ಈಕೆಗೆ ನಾನು ನ್ಯಾಯವನ್ನು ದೊರಕಿಸಿಕೊಟ್ಟರೆ, ಈಕೆ ನನ್ನನ್ನು ಕಾಡಿಸುವುದಿಲ್ಲ. ಇಲ್ಲವಾದರೆ, ಈಕೆಯು ನನ್ನನ್ನು ಕಾಡಿಸುತ್ತಲೇ ಇರುವಳು’ ಎಂದುಕೊಂಡನು.”
ಲೂಕನು 18 : 6 (ERVKN)
ಪ್ರಭುವು ಈ ಸಾಮ್ಯವನ್ನು ಹೇಳಿದ ಮೇಲೆ ತನ್ನ ಶಿಷ್ಯರಿಗೆ, “ಕೇಳಿರಿ! ಆ ಅನ್ಯಾಯಗಾರನಾದ ನ್ಯಾಯಾಧೀಶನು ಹೇಳಿದ್ದರಲ್ಲಿ ಅರ್ಥವಿದೆ.
ಲೂಕನು 18 : 7 (ERVKN)
ದೇವಜನರು ದೇವರಿಗೆ ಹಗಲಿರುಳು ಮೊರೆಯಿಡಬೇಕು. ದೇವರು ತನ್ನ ಜನರಿಗೆ ಸರಿಯಾದದ್ದನ್ನೇ ಯಾವಾಗಲೂ ಕೊಡುತ್ತಾನೆ. ತನ್ನ ಜನರಿಗೆ ಉತ್ತರ ಕೊಡುವುದರಲ್ಲಿ ದೇವರು ತಡಮಾಡುವುದಿಲ್ಲ!
ಲೂಕನು 18 : 8 (ERVKN)
ದೇವರು ತನ್ನ ಜನರಿಗೆ ಬೇಗನೆ ಸಹಾಯ ಮಾಡುತ್ತಾನೆ ಎಂದು ನಾನು ನಿಮಗೆ ಹೇಳುತ್ತೇನೆ. ಆದರೆ ಮನುಷ್ಯಕುಮಾರನು ಮತ್ತೆ ಬಂದಾಗ, ಜಗತ್ತಿನಲ್ಲಿ ನಂಬಿಕೆಯನ್ನು ಕಾಣುವನೋ?” ಎಂದನು.
ಲೂಕನು 18 : 9 (ERVKN)
ನೀತಿನಿರ್ಣಯ ಅಲ್ಲಿ ಕೆಲವರು ತಾವೇ ಬಹಳ ಒಳ್ಳೆಯವರೆಂದು ಭಾವಿಸಿಕೊಂಡಿದ್ದರು. ಈ ಜನರು ತಾವು ಬೇರೆಯವರಿಗಿಂತ ಉತ್ತಮರೋ ಎಂಬಂತೆ ವರ್ತಿಸುತ್ತಿದ್ದರು. ಯೇಸು ಅವರಿಗೆ ಈ ಸಾಮ್ಯದ ಮೂಲಕ ಉಪದೇಶಿಸಿದನು.
ಲೂಕನು 18 : 10 (ERVKN)
“ಒಮ್ಮೆ ಒಬ್ಬ ಫರಿಸಾಯನು ಮತ್ತು ಒಬ್ಬ ಸುಂಕವಸೂಲಿಗಾರನು ಪ್ರಾರ್ಥಿಸಲು ದೇವಾಲಯಕ್ಕೆ ಹೋದರು.
ಲೂಕನು 18 : 11 (ERVKN)
ಫರಿಸಾಯನು ಸುಂಕವಸೂಲಿಗಾರನನ್ನು ಕಂಡು ದೂರದಲ್ಲಿ ನಿಂತುಕೊಂಡು ಹೀಗೆ ಪ್ರಾರ್ಥಿಸಿದನು: ‘ದೇವರೇ, ನಾನು ಬೇರೆಯವರಂತೆ ಸುಲಿಗೆಗಾರನಲ್ಲ, ಮೋಸಗಾರನಲ್ಲ, ಅಥವಾ ವ್ಯಭಿಚಾರಿಯಲ್ಲ. ನಾನು ಈ ಸುಂಕವಸೂಲಿಗಾರನಂತೆಯೂ ಅಲ್ಲ. ಇದಕ್ಕಾಗಿ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ.
ಲೂಕನು 18 : 12 (ERVKN)
ನಾನಾದರೋ ವಾರದಲ್ಲಿ ಎರಡಾವರ್ತಿ ಉಪವಾಸ ಮಾಡುತ್ತೇನೆ. ಸಂಪಾದಿಸುವ ಪ್ರತಿಯೊಂದರಲ್ಲಿಯೂ ಹತ್ತನೆಯ ಒಂದು ಭಾಗವನ್ನು ನಿನಗೆ ಕೊಡುತ್ತೇನೆ!’ ಅಂದನು.
ಲೂಕನು 18 : 13 (ERVKN)
“ಸುಂಕವಸೂಲಿಗಾರನು ಅಲ್ಲಿ ಒಬ್ಬಂಟಿಗನಾಗಿಯೇ ನಿಂತುಕೊಂಡಿದ್ದನು. ಅವನು ಆಕಾಶದ ಕಡೆಗೆ ಕಣ್ಣೆತ್ತಿ ನೋಡದೇ, ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು, ‘ದೇವರೇ, ನನಗೆ ಕರುಣೆತೋರು; ನಾನು ಪಾಪಿಯಾಗಿದ್ದೇನೆ’ ಎಂದು ಪ್ರಾರ್ಥಿಸಿದನು.
ಲೂಕನು 18 : 14 (ERVKN)
ಅವನು ಪ್ರಾರ್ಥಿಸಿದ ಬಳಿಕ ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ಮನೆಗೆ ಹೋದನು ಎಂದು ನಾನು ನಿಮಗೆ ಹೇಳುತ್ತೇನೆ. ಆದರೆ ಆ ಫರಿಸಾಯನು ನೀತಿವಂತನೆಂದು ನಿರ್ಣಯಿಸಲ್ಪಡಲಿಲ್ಲ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನೂ ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವ ಪ್ರತಿಯೊಬ್ಬನೂ ಹೆಚ್ಚಿಸಲ್ಪಡುವನು.” ದೇವರ ರಾಜ್ಯಕ್ಕೆ ಯಾರು ಪ್ರವೇಶಿಸುವರು? (ಮತ್ತಾಯ 19:13-15; ಮಾರ್ಕ 10:13-16)
ಲೂಕನು 18 : 15 (ERVKN)
ಕೆಲವು ಜನರು ತಮ್ಮ ಚಿಕ್ಕಮಕ್ಕಳನ್ನು ಯೇಸುವಿನಿಂದ ಮುಟ್ಟಿಸಬೇಕೆಂದು ಆತನ ಬಳಿಗೆ ತಂದರು. ಆದರೆ ಶಿಷ್ಯರು ಇದನ್ನು ನೋಡಿ, “ಮಕ್ಕಳನ್ನು ತರಕೂಡದು” ಎಂದು ಜನರಿಗೆ ಹೇಳಿದರು.
ಲೂಕನು 18 : 16 (ERVKN)
ಆದರೆ ಯೇಸುವು ಚಿಕ್ಕಮಕ್ಕಳನ್ನು ತನ್ನ ಬಳಿಗೆ ಕರೆದು ತನ್ನ ಶಿಷ್ಯರಿಗೆ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಗೊಡಿಸಿರಿ. ಅವರಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ದೇವರ ರಾಜ್ಯವು ಈ ಚಿಕ್ಕಮಕ್ಕಳಂತಿರುವ ಜನರದೇ.
ಲೂಕನು 18 : 17 (ERVKN)
ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಶಿಶುಭಾವದಿಂದ ನೀವು ದೇವರ ರಾಜ್ಯವನ್ನು ಅಂಗೀಕರಿಸಬೇಕು. ಇಲ್ಲವಾದರೆ, ನೀವು ಎಂದಿಗೂ ಅದರೊಳಗೆ ಪ್ರವೇಶಿಸುವುದಿಲ್ಲ!” ಎಂದು ಹೇಳಿದನು.
ಲೂಕನು 18 : 18 (ERVKN)
ಐಶ್ವರ್ಯವಂತನೊಬ್ಬನು ಯೇಸುವಿಗೆ ಕೇಳಿದ ಪ್ರಶ್ನೆ (ಮತ್ತಾಯ 19:16-30; ಮಾರ್ಕ 10:17-31) ಒಬ್ಬ ಯೆಹೂದ್ಯನಾಯಕನು ಯೇಸುವಿಗೆ, “ಒಳ್ಳೆಯ ಉಪದೇಶಕನೇ, ನಿತ್ಯಜೀವ ಹೊಂದಲು ನಾನೇನು ಮಾಡಬೇಕು?” ಎಂದು ಕೇಳಿದನು.
ಲೂಕನು 18 : 19 (ERVKN)
ಯೇಸು ಅವನಿಗೆ, “ನನ್ನನ್ನು ಒಳ್ಳೆಯವನೆಂದು ನೀನು ಏಕೆ ಕರೆಯುತ್ತೀ? ದೇವರೊಬ್ಬನೇ ಒಳ್ಳೆಯವನು.
ಲೂಕನು 18 : 20 (ERVKN)
ದೇವರ ಈ ಆಜ್ಞೆಗಳು ನಿನಗೆ ಗೊತ್ತೇ ಇವೆ: ‘ನೀನು ವ್ಯಭಿಚಾರ ಮಾಡಬಾರದು, ಯಾರನ್ನೂ ಕೊಲೆಮಾಡಬಾರದು, ಯಾವುದನ್ನೂ ಕದಿಯಬಾರದು, ಬೇರೆ ಜನರ ಬಗ್ಗೆ ನೀನು ಸುಳ್ಳನ್ನು ಹೇಳಬಾರದು ಮತ್ತು ನೀನು ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು’ ” ✡ಉಲ್ಲೇಖನ: ವಿಮೋಚನ. 20:12-16; ಧರ್ಮೋಪದೇಶ. 5:16-20. ಎಂದನು.
ಲೂಕನು 18 : 21 (ERVKN)
ಅದಕ್ಕೆ ಅವನು, “ನಾನು ಚಿಕ್ಕಂದಿನಿಂದಲೂ ಆ ಆಜ್ಞೆಗಳಿಗೆಲ್ಲಾ ವಿಧೇಯನಾಗಿದ್ದೇನೆ!” ಎಂದು ಹೇಳಿದನು.
ಲೂಕನು 18 : 22 (ERVKN)
ಆಗ ಯೇಸು ಅವನಿಗೆ, “ನೀನು ಮಾಡಬೇಕಾದ ಇನ್ನೊಂದು ಕಾರ್ಯವಿದೆ. ನಿನ್ನ ಆಸ್ತಿಯನ್ನೆಲ್ಲಾ ಮಾರಿ ಅದರಿಂದ ಬಂದ ಹಣವನ್ನು ಬಡ ಜನರಿಗೆ ಕೊಡು. ನಿನಗೆ ಪರಲೋಕದಲ್ಲಿ ಪ್ರತಿಫಲ ದೊರೆಯುವುದು. ನೀನಾದರೋ ಬಂದು ನನ್ನನ್ನು ಹಿಂಬಾಲಿಸು!” ಅಂದನು.
ಲೂಕನು 18 : 23 (ERVKN)
ಯೇಸುವಿನ ಈ ಮಾತುಗಳನ್ನು ಕೇಳಿದಾಗ ಅವನಿಗೆ ಬಹಳ ದುಃಖವಾಯಿತು. ಏಕೆಂದರೆ ಅವನು ಬಹಳ ಐಶ್ವರ್ಯವಂತನಾಗಿದ್ದನು.
ಲೂಕನು 18 : 24 (ERVKN)
ಆಗ ಯೇಸು ಅವನನ್ನು ನೋಡಿ, “ಐಶ್ವರ್ಯವಂತರು ದೇವರರಾಜ್ಯಕ್ಕೆ ಸೇರುವುದು ಬಹಳ ಕಷ್ಟ!
ಲೂಕನು 18 : 25 (ERVKN)
ಐಶ್ವರ್ಯವಂತನು ದೇವರ ರಾಜ್ಯಕ್ಕೆ ಪ್ರವೇಶಿಸುವುದಕ್ಕಿಂತಲೂ ಒಂಟೆಯು ಸೂಜಿಯ ಕಣ್ಣಿನ ಮೂಲಕ ನುಸುಳಿ ಹೋಗುವುದು ಸುಲಭ!” ಎಂದನು. ಯಾರಿಗೆ ರಕ್ಷಣೆಯಾಗುವುದು?
ಲೂಕನು 18 : 26 (ERVKN)
ಜನರು ಯೇಸುವಿನ ಈ ಮಾತನ್ನು ಕೇಳಿ, “ಹಾಗಾದರೆ ಯಾರಿಗೆ ರಕ್ಷಣೆಯಾಗುವುದು?” ಎಂದು ಕೇಳಿದರು.
ಲೂಕನು 18 : 27 (ERVKN)
ಯೇಸು ಅವರಿಗೆ, “ಜನರಿಗೆ ಅಸಾಧ್ಯವಾದ ಕಾರ್ಯಗಳನ್ನು ದೇವರು ಮಾಡಬಲ್ಲನು” ಎಂದು ಉತ್ತರಿಸಿದನು.
ಲೂಕನು 18 : 28 (ERVKN)
ಪೇತ್ರನು, “ನೋಡು, ನಾವು ನಮ್ಮದೆಲ್ಲವನ್ನೂ ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು!” ಅಂದನು.
ಲೂಕನು 18 : 29 (ERVKN)
ಅದಕ್ಕೆ ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ದೇವರ ರಾಜ್ಯದ ನಿಮಿತ್ತ ತನ್ನ ಮನೆ, ಹೆಂಡತಿ, ಸಹೋದರರು, ತಂದೆತಾಯಿಗಳು ಅಥವಾ ಮಕ್ಕಳನ್ನು ತ್ಯಜಿಸಿದ ಪ್ರತಿಯೊಬ್ಬನು ತಾನು ತ್ಯಜಿಸಿದ್ದಕ್ಕಿಂತಲೂ ಹೆಚ್ಚು ಪಡೆಯುವನು.
ಲೂಕನು 18 : 30 (ERVKN)
ಅವನು ಈ ಜೀವನದಲ್ಲಿಯೇ ಅವುಗಳಿಗಿಂತ ಅನೇಕ ಪಾಲು ಹೆಚ್ಚಾದವುಗಳನ್ನು ಪಡೆಯುವನು ಮತ್ತು ತನ್ನ ಮುಂದಿನ ಲೋಕದಲ್ಲಿ ದೇವರೊಂದಿಗೆ ಸದಾಕಾಲ ಜೀವಿಸುವನು” ಎಂದು ಹೇಳಿದನು.
ಲೂಕನು 18 : 31 (ERVKN)
ತನ್ನ ಮರಣದ ಬಗ್ಗೆ ಯೇಸುವಿನ ಪ್ರಕಟನೆ (ಮತ್ತಾಯ 20:17-19; ಮಾರ್ಕ 10:32-34) ಬಳಿಕ ಯೇಸು ತನ್ನ ಹನ್ನೆರಡು ಮಂದಿ ಅಪೊಸ್ತಲರೊಂದಿಗೆ ಪ್ರತ್ಯೇಕವಾಗಿ ಮಾತಾಡಿದನು. ಅವರಿಗೆ, “ಕೇಳಿರಿ! ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ದೇವರು ತನ್ನ ಪ್ರವಾದಿಗಳ ಮೂಲಕ ಮನುಷ್ಯಕುಮಾರನ ಬಗ್ಗೆ ಬರೆಸಿರುವ ಪ್ರತಿಯೊಂದು ಸಂಗತಿಯೂ ಸಂಭವಿಸುವುದು!
ಲೂಕನು 18 : 32 (ERVKN)
ಆತನ ಜನರೇ ಆತನಿಗೆ ವಿರೋಧವಾಗಿ ಎದ್ದು ಯೆಹೂದ್ಯರಲ್ಲದ ಜನರಿಗೆ ಆತನನ್ನು ಒಪ್ಪಿಸಿಕೊಡುವರು. ಅವರು ಆತನನ್ನು ಗೇಲಿಮಾಡಿ ಆತನ ಮುಖಕ್ಕೆ ಉಗುಳುವರು. ಆತನಿಗೆ ಅವಮಾನ ಮಾಡುವರು ಮತ್ತು ನಾಚಿಕೆಪಡಿಸುವರು.
ಲೂಕನು 18 : 33 (ERVKN)
ಅವರು ಆತನಿಗೆ ಕೊರಡೆಗಳಿಂದ ಹೊಡೆಯುವರು ಮತ್ತು ಆತನನ್ನು ಕೊಲ್ಲುವರು! ಆದರೆ ಆತನು ತನ್ನ ಮೂರನೇ ದಿನದಲ್ಲಿ ಮತ್ತೆ ಜೀವಂತವಾಗಿ ಎದ್ದುಬರುವನು” ಅಂದನು.
ಲೂಕನು 18 : 34 (ERVKN)
ಅಪೊಸ್ತಲರು ಇದನ್ನು ಗ್ರಹಿಸಿಕೊಳ್ಳಲು ಪ್ರಯತ್ನಿಸಿದರೂ ಅವರಿಗೆ ಸಾಧ್ಯವಾಗಲಿಲ್ಲ, ಏಕೆಂದರೆ ಅದರ ಅರ್ಥವು ಅವರಿಗೆ ಮರೆಯಾಗಿತ್ತು.
ಲೂಕನು 18 : 35 (ERVKN)
ಯೇಸುವಿನಿಂದ ಕಣ್ಣುಪಡೆದ ಕುರುಡ (ಮತ್ತಾಯ 20:29-34; ಮಾರ್ಕ 10:46-52) ಯೇಸು ಜೆರಿಕೊ ಪಟ್ಟಣವನ್ನು ಸಮೀಪಿಸುತ್ತಿದ್ದಾಗ, ಆ ರಸ್ತೆಯ ಪಕ್ಕದಲ್ಲಿ ಒಬ್ಬ ಕುರುಡನು ಕುಳಿತುಕೊಂಡು ಭಿಕ್ಷೆಬೇಡುತ್ತಿದ್ದನು.
ಲೂಕನು 18 : 36 (ERVKN)
ಆ ರಸ್ತೆಯಲ್ಲಿ ಜನಸಮೂಹದ ಶಬ್ದವನ್ನು ಕೇಳಿ ಆ ಕುರುಡನು, “ಯಾವ ಸಮಾರಂಭ ನಡೆಯುತ್ತಿದೆ?” ಎಂದು ಕೇಳಿದನು.
ಲೂಕನು 18 : 37 (ERVKN)
ಜನರು ಅವನಿಗೆ, “ನಜರೇತಿನ ಯೇಸು ಬರುತ್ತಿದ್ದಾನೆ” ಎಂದು ತಿಳಿಸಿದರು.
ಲೂಕನು 18 : 38 (ERVKN)
ಆ ಕುರುಡನು ಗಟ್ಟಿಯಾಗಿ, “ಯೇಸುವೇ, ದಾವೀದನ ಕುಮಾರನೇ, ದಯಮಾಡಿ ನನಗೆ ಸಹಾಯಮಾಡು!” ಎಂದು ಕೂಗಿದನು.
ಲೂಕನು 18 : 39 (ERVKN)
ಜನಸಮೂಹದ ಮುಂದಿದ್ದ ಜನರು ಕುರುಡನನ್ನು ಗದರಿಸಿ, ಅವನಿಗೆ ಮಾತಾಡಕೂಡದೆಂದು ಹೇಳಿದರು. ಆದರೆ ಆ ಕುರುಡನು ಮತ್ತಷ್ಟು ಗಟ್ಟಿಯಾಗಿ, “ದಾವೀದನ ಕುಮಾರನೇ, ದಯಮಾಡಿ ನನಗೆ ಸಹಾಯಮಾಡು!” ಎಂದು ಕೂಗಿದನು.
ಲೂಕನು 18 : 40 (ERVKN)
ಯೇಸು ಅಲ್ಲೇ ನಿಂತು, “ಆ ಕುರುಡನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ” ಎಂದು ಹೇಳಿದನು. ಆ ಕುರುಡನು ಹತ್ತಿರಕ್ಕೆ ಬಂದಾಗ, ಯೇಸು ಅವನಿಗೆ
ಲೂಕನು 18 : 41 (ERVKN)
“ನಾನು ನಿನಗಾಗಿ ಏನು ಮಾಡಬೇಕು?” ಎಂದು ಕೇಳಿದನು. ಕುರುಡನು, “ಪ್ರಭುವೇ, ನನಗೆ ಮತ್ತೆ ಕಣ್ಣು ಕಾಣುವಂತೆ ಮಾಡು” ಅಂದನು.
ಲೂಕನು 18 : 42 (ERVKN)
ಯೇಸು ಅವನಿಗೆ, “ನೀನು ನಂಬಿದ್ದರಿಂದಲೇ ನಿನಗೆ ವಾಸಿಯಾಯಿತು” ಎಂದು ಹೇಳಿದನು.
ಲೂಕನು 18 : 43 (ERVKN)
ಆಗ ಆ ಕುರುಡನಿಗೆ ದೃಷ್ಟಿ ಬಂದಿತು. ಅವನು ದೇವರನ್ನು ಸ್ತುತಿಸುತ್ತಾ ಯೇಸುವನ್ನು ಹಿಂಬಾಲಿಸಿದನು. ಇದನ್ನು ನೋಡಿದ ಜನರೆಲ್ಲರೂ ಈ ಮಹತ್ಕಾರ್ಯಕ್ಕಾಗಿ ದೇವರನ್ನು ಕೊಂಡಾಡಿದರು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43