ಮಾರ್ಕನು 15 : 1 (ERVKN)
ಪಿಲಾತನಿಂದ ಯೇಸುವಿನ ವಿಚಾರಣೆ ಮುಂಜಾನೆ ನಸುಕಿನಲ್ಲೇ, ಮಹಾಯಾಜಕರು, ಹಿರಿಯ ಯೆಹೂದ್ಯನಾಯಕರು ಧರ್ಮೋಪದೇಶಕರು ಮತ್ತು ಯೆಹೂದ್ಯ ಸಮಿತಿಯವರು ಸಭೆಸೇರಿ ಯೇಸುವಿಗೆ ಮಾಡಬೇಕಾದದ್ದನ್ನು ನಿರ್ಧರಿಸಿದರು. ಅವರು ಯೇಸುವನ್ನು ಬಂಧಿಸಿ, ರಾಜ್ಯಪಾಲನಾದ ಪಿಲಾತನ ಬಳಿಗೆ ಕರೆದುಕೊಂಡು ಹೋಗಿ ಅವನಿಗೆ ಒಪ್ಪಿಸಿದರು.
ಮಾರ್ಕನು 15 : 2 (ERVKN)
ಪಿಲಾತನು ಯೇಸುವಿಗೆ, “ನೀನು ಯೆಹೂದ್ಯರ ರಾಜನೋ?” ಎಂದು ಕೇಳಿದನು. ಯೇಸು, “ಹೌದು, ನೀನು ಹೇಳಿದ್ದು ಸರಿ” ಎಂದು ಉತ್ತರಿಸಿದನು.
ಮಾರ್ಕನು 15 : 3 (ERVKN)
ಮಹಾಯಾಜಕರು ಯೇಸುವಿನ ಮೇಲೆ ಅನೇಕ ತಪ್ಪುಗಳನ್ನು ಹೊರಿಸಿದರು.
ಮಾರ್ಕನು 15 : 4 (ERVKN)
ಆದ್ದರಿಂದ ಪಿಲಾತನು ಯೇಸುವಿಗೆ ಮತ್ತೊಮ್ಮೆ, “ಈ ಜನರು ನಿನ್ನ ಮೇಲೆ ಅನೇಕ ಅಪರಾಧಗಳನ್ನು ಹೊರಿಸುತ್ತಿದ್ದರೂ ನೀನು ಏಕೆ ಉತ್ತರಿಸುವುದಿಲ್ಲ?” ಎಂದು ಕೇಳಿದನು.
ಮಾರ್ಕನು 15 : 5 (ERVKN)
ಆದರೆ ಯೇಸು ಮೌನವಾಗಿದ್ದನು. ಪಿಲಾತನಿಗೆ ಇದರಿಂದ ಬಹಳ ಆಶ್ಚರ್ಯವಾಯಿತು.
ಮಾರ್ಕನು 15 : 6 (ERVKN)
ಯೇಸುವನ್ನು ಬಿಡಿಸಲು ಪಿಲಾತನು ಮಾಡಿದ ವಿಫಲ ಪ್ರಯತ್ನ (ಮತ್ತಾಯ 27:15-31; ಲೂಕ 23:13-25; ಯೋಹಾನ 18:39-19:16) ಪ್ರತಿ ವರ್ಷವೂ ಪಸ್ಕಹಬ್ಬದ ಸಮಯದಲ್ಲಿ ಜನರು ಬಯಸಿದ ಕೈದಿಯನ್ನು ರಾಜ್ಯಪಾಲನು ಸೆರೆಮನೆಯಿಂದ ಬಿಡುಗಡೆ ಮಾಡುತ್ತಿದ್ದನು.
ಮಾರ್ಕನು 15 : 7 (ERVKN)
ಆ ಸಮಯದಲ್ಲಿ ಬರಬ್ಬ ಎಂಬವನು ದಂಗೆಕೋರರೊಂದಿಗೆ ಸೆರೆಮನೆಯಲ್ಲಿದ್ದನು. ಈ ದಂಗೆಕೋರರು ಒಂದು ಗಲಭೆಯ ಸಮಯದಲ್ಲಿ ಕೊಲೆ ಮಾಡಿದ ಆಪಾದನೆಗೆ ಗುರಿಯಾಗಿದ್ದರು.
ಮಾರ್ಕನು 15 : 8 (ERVKN)
ಜನರು ಪಿಲಾತನ ಬಳಿಗೆ, ಎಂದಿನಂತೆ ತಮಗಾಗಿ ಒಬ್ಬ ಕೈದಿಯನ್ನು ಬಿಡುಗಡೆ ಮಾಡಬೇಕೆಂದು ಕೇಳಿದರು.
ಮಾರ್ಕನು 15 : 9 (ERVKN)
ಪಿಲಾತನು ಜನರಿಗೆ, “ನಾನು ಯೆಹೂದ್ಯರ ರಾಜನನ್ನು ಬಿಡುಗಡೆ ಮಾಡಬೇಕೆಂದು ಬಯಸುತ್ತೀರಾ?” ಎಂದು ಕೇಳಿದನು.
ಮಾರ್ಕನು 15 : 10 (ERVKN)
ಮಹಾಯಾಜಕರು ಹೊಟ್ಟೆಕಿಚ್ಚಿನಿಂದ ಯೇಸುವನ್ನು ಬಂಧಿಸಿ ತನಗೆ ಒಪ್ಪಿಸಿದ್ದಾರೆಂಬುದು ಪಿಲಾತನಿಗೆ ತಿಳಿದಿತ್ತು.
ಮಾರ್ಕನು 15 : 11 (ERVKN)
ಆದರೆ ಯೇಸುವನ್ನು ಬಿಡುಗಡೆ ಮಾಡದೆ ಬರಬ್ಬನನ್ನು ಬಿಡುಗಡೆ ಮಾಡುವಂತೆ ಪಿಲಾತನನ್ನು ಕೇಳಿಕೊಳ್ಳಬೇಕೆಂದು ಮಹಾಯಾಜಕರು ಜನರನ್ನು ಪ್ರೇರೇಪಿಸಿದರು.
ಮಾರ್ಕನು 15 : 12 (ERVKN)
ಪಿಲಾತನು ಜನರಿಗೆ ಮತ್ತೆ “ಯೆಹೂದ್ಯರ ರಾಜನೆಂದು ನೀವು ಕರೆಯುವ ಈ ಮನುಷ್ಯನನ್ನು ನಾನೇನು ಮಾಡಲಿ?” ಎಂದು ಕೇಳಿದನು.
ಮಾರ್ಕನು 15 : 13 (ERVKN)
ಜನರು, “ಅವನನ್ನು ಶಿಲುಬೆಗೇರಿಸು!” ಎಂದು ಆರ್ಭಟಿಸಿದರು.
ಮಾರ್ಕನು 15 : 14 (ERVKN)
ಪಿಲಾತನು, “ಏಕೆ? ಅವನು ಯಾವ ಅಪರಾಧ ಮಾಡಿದ್ದಾನೆ?” ಎಂದು ಕೇಳಿದನು. ಅದಕ್ಕೆ ಜನರು, “ಅವನನ್ನು ಶಿಲುಬೆಗೇರಿಸು!” ಎಂದು ಜೋರಾಗಿ ಆರ್ಭಟಿಸಿದರು.
ಮಾರ್ಕನು 15 : 15 (ERVKN)
ಪಿಲಾತನು ಜನರನ್ನು ಸಂತೋಷಪಡಿಸಲು ಬಯಸಿ ಅವರಿಗಾಗಿ ಬರಬ್ಬನನ್ನು ಬಿಡುಗಡೆ ಮಾಡಿದನು ಮತ್ತು ಕೊರಡೆಗಳಿಂದ ಹೊಡೆದು ಶಿಲುಬೆಗೇರಿಸುವುದಕ್ಕಾಗಿ ಯೇಸುವನ್ನು ಸೈನಿಕರಿಗೆ ಒಪ್ಪಿಸಿದನು.
ಮಾರ್ಕನು 15 : 16 (ERVKN)
ಪಿಲಾತನ ಸೈನಿಕರು ಯೇಸುವನ್ನು ರಾಜಭವನದ ಅಂಗಳದೊಳಕ್ಕೆ ಕೊಂಡೊಯ್ದು ಇತರ ಸೈನಿಕರನ್ನೆಲ್ಲಾ ಒಟ್ಟಿಗೆ ಕರೆದರು.
ಮಾರ್ಕನು 15 : 17 (ERVKN)
ಸೈನಿಕರು ಯೇಸುವಿನ ಮೇಲೆ ಕಡುಕೆಂಪಾದ ನಿಲುವಂಗಿಯನ್ನು ಹಾಕಿ ಮುಳ್ಳಿನ ಬಳ್ಳಿಗಳಿಂದ ಒಂದು ಕಿರೀಟ ಮಾಡಿ ಯೇಸುವಿನ ತಲೆಯ ಮೇಲೆ ಇಟ್ಟರು.
ಮಾರ್ಕನು 15 : 18 (ERVKN)
ನಂತರ ಅವರು ಯೇಸುವಿಗೆ, “ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ!” ಎಂದರು.
ಮಾರ್ಕನು 15 : 19 (ERVKN)
ಸೈನಿಕರು ಆತನ ತಲೆಯ ಮೇಲೆ ಅನೇಕ ಸಾರಿ ಬೆತ್ತದಿಂದ ಹೊಡೆದು ಆತನ ಮೇಲೆ ಉಗುಳಿದರು. ನಂತರ ಅವರು ಯೇಸುವಿನ ಮುಂದೆ ಮೊಣಕಾಲೂರಿ, ಆತನನ್ನು ಆರಾಧಿಸುವಂತೆ ನಟಿಸುತ್ತಾ ಪರಿಹಾಸ್ಯ ಮಾಡಿದರು.
ಮಾರ್ಕನು 15 : 20 (ERVKN)
ಆ ಬಳಿಕ ಸೈನಿಕರು ಕಡುಕೆಂಪಾದ ನಿಲುವಂಗಿಯನ್ನು ತೆಗೆದುಬಿಟ್ಟು, ಆತನ ಬಟ್ಟೆಗಳನ್ನೇ ಮತ್ತೆ ತೊಡಿಸಿದರು. ನಂತರ ಅವರು ಯೇಸುವನ್ನು ಶಿಲುಬೆಗೇರಿಸಲು ಕರೆದುಕೊಂಡು ಹೋದರು.
ಮಾರ್ಕನು 15 : 21 (ERVKN)
ಶಿಲುಬೆಗೇರಿಸಲ್ಪಟ್ಟ ಯೇಸು (ಮತ್ತಾಯ 27:32-44; ಲೂಕ 23:26-43; ಯೋಹಾನ 19:17-27) ಆಗ ಸಿರೇನ್ ಪಟ್ಟಣದ ಸಿಮೋನ ಎಂಬವನು ಹೊಲದಿಂದ ಬರುತ್ತಿದ್ದನು. ಅವನು ಅಲೆಕ್ಸಾಂಡರ್ ಮತ್ತು ರೂಫಸ್ ಎಂಬವರ ತಂದೆ. ಸೈನಿಕರು ಯೇಸುವಿನ ಶಿಲುಬೆಯನ್ನು ಹೊರುವಂತೆ ಸಿಮೋನನನ್ನು ಬಲವಂತ ಮಾಡಿದರು.
ಮಾರ್ಕನು 15 : 22 (ERVKN)
ಅವರು ಯೇಸುವನ್ನು ಗೊಲ್ಗೊಥ ಎಂಬ ಸ್ಥಳಕ್ಕೆ ಕರೆದುಕೊಂಡು ಹೋದರು. (ಗೊಲ್ಗೊಥ ಎಂದರೆ “ಕಪಾಲ ಸ್ಥಳ.”)
ಮಾರ್ಕನು 15 : 23 (ERVKN)
ಗೊಲ್ಗೊಥದಲ್ಲಿ ಸೈನಿಕರು ಯೇಸುವಿಗೆ ರಕ್ತಬೋಳ ಮಿಶ್ರಿತವಾದ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟರು. ಆದರೆ ಯೇಸು ಅದನ್ನು ಕುಡಿಯಲಿಲ್ಲ.
ಮಾರ್ಕನು 15 : 24 (ERVKN)
ಸೈನಿಕರು ಯೇಸುವನ್ನು ಶಿಲುಬೆಗೆ ನೇತುಹಾಕಿ, ಮೊಳೆಗಳನ್ನು ಜಡಿದರು. ನಂತರ ಸೈನಿಕರು ಚೀಟು ಹಾಕಿ ಯೇಸುವಿನ ಬಟ್ಟೆಗಳನ್ನು ತಮ್ಮಲ್ಲಿ ಹಂಚಿಕೊಂಡರು.
ಮಾರ್ಕನು 15 : 25 (ERVKN)
ಅವರು ಯೇಸುವನ್ನು ಶಿಲುಬೆಗೇರಿಸಿದಾಗ ಬೆಳಿಗ್ಗೆ ಒಂಭತ್ತು ಗಂಟೆಯಾಗಿತ್ತು.
ಮಾರ್ಕನು 15 : 26 (ERVKN)
ಯೇಸುವಿನ ವಿರುದ್ಧ ಮಾಡಲಾದ ಆಪಾದನೆಯನ್ನು ಅಂದರೆ “ಯೆಹೂದ್ಯರ ರಾಜ” ಎಂದು ಶಿಲುಬೆಯ ಮೇಲೆ ಬರೆಯಲಾಗಿತ್ತು.
ಮಾರ್ಕನು 15 : 27 (ERVKN)
ಅಲ್ಲದೆ ಅವರು ಯೇಸುವಿನ ಪಕ್ಕದಲ್ಲಿ ಇಬ್ಬರು ಕಳ್ಳರನ್ನು ಶಿಲುಬೆಗೆ ಹಾಕಿದರು. ಅವರು ಒಬ್ಬ ಕಳ್ಳನನ್ನು ಯೇಸುವಿನ ಬಲಗಡೆಯಲ್ಲಿಯೂ ಇನ್ನೊಬ್ಬ ಕಳ್ಳನನ್ನು ಯೇಸುವಿನ ಎಡಗಡೆಯಲ್ಲಿಯೂ ಹಾಕಿದ್ದರು.
ಮಾರ್ಕನು 15 : 28 (ERVKN)
*ಕೆಲವು ಗ್ರೀಕ್ ಪ್ರತಿಗಳಲ್ಲಿ 28 ನೇ ವಚನವನ್ನು ಸೇರಿಸಲಾಗಿದೆ: “ಆತನು ಅಧರ್ಮಿಗಳ ಸಂಗಡ ಎಣಿಸಲ್ಪಟ್ಟನು” ಎಂಬ ಶಾಸ್ತ್ರ ವಚನವು ಹೀಗೆ ನೆರವೇರಿತು.
ಮಾರ್ಕನು 15 : 29 (ERVKN)
ಅಲ್ಲಿ ನಡೆದುಹೋಗುತ್ತಿದ್ದವರು ತಮ್ಮ ತಲೆಯಾಡಿಸುತ್ತಾ, “ನೀನು ದೇವಾಲಯವನ್ನು ಕೆಡವಿ, ಅದನ್ನು ಮತ್ತೆ ಮೂರು ದಿನಗಳಲ್ಲಿ ಕಟ್ಟುತ್ತೇನೆಂದು ಹೇಳಿದೆ.
ಮಾರ್ಕನು 15 : 30 (ERVKN)
ಈಗ ಶಿಲುಬೆಯಿಂದ ಕೆಳಗಿಳಿದು ಬಂದು ನಿನ್ನನ್ನು ರಕ್ಷಿಸಿಕೊ!” ಎಂದು ಅಪಹಾಸ್ಯ ಮಾಡಿದರು.
ಮಾರ್ಕನು 15 : 31 (ERVKN)
ಅಲ್ಲಿದ್ದ ಮಹಾಯಾಜಕರು ಹಾಗೂ ಧರ್ಮೋಪದೇಶಕರು ಸಹ, “ಅವನು ಇತರ ಜನರನ್ನು ರಕ್ಷಿಸಿದನು. ಆದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.
ಮಾರ್ಕನು 15 : 32 (ERVKN)
ಅವನು ನಿಜವಾಗಲೂ ಇಸ್ರೇಲರ ರಾಜನಾದ ಕ್ರಿಸ್ತನಾಗಿದ್ದರೆ, ಈಗ ಶಿಲುಬೆಯಿಂದ ಕೆಳಗಿಳಿದು ಬಂದು ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ. ಆಗ ನಾವು ಅವನನ್ನು ನಂಬುತ್ತೇವೆ” ಎಂದು ಅಪಹಾಸ್ಯ ಮಾಡಿದರು. ಯೇಸುವಿನ ಪಕ್ಕದ ಶಿಲುಬೆಗಳಿಗೆ ಹಾಕಲ್ಪಟ್ಟಿದ್ದ ಕಳ್ಳರು ಸಹ ಆತನನ್ನು ಗೇಲಿಮಾಡಿದರು.
ಮಾರ್ಕನು 15 : 33 (ERVKN)
ಯೇಸುವಿನ ಮರಣ (ಮತ್ತಾಯ 27:45-56; ಲೂಕ 23:44-49; ಯೋಹಾನ 19:28-30) ಮಧ್ಯಾಹ್ನವಾದಾಗ, ಇಡೀ ದೇಶವೇ ಕತ್ತಲಾಯಿತು. ಈ ಕತ್ತಲೆಯು ಸಾಯಂಕಾಲ ಮೂರು ಗಂಟೆಯವರೆಗೆ ಇತ್ತು.
ಮಾರ್ಕನು 15 : 34 (ERVKN)
ಮೂರು ಗಂಟೆಗೆ, ಯೇಸು ದೊಡ್ಡ ಧ್ವನಿಯಿಂದ, “ಎಲೋಹಿ, ಎಲೋಹಿ, ಲಮಾ ಸಬಕ್ತಾನಿ?” ಎಂದು ಕೂಗಿದನು. “ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟೆ?” ಉಲ್ಲೇಖನ: ಕೀರ್ತನೆ. 22:1. ಎಂಬುದೇ ಇದರರ್ಥ.
ಮಾರ್ಕನು 15 : 35 (ERVKN)
ಅಲ್ಲಿ ನಿಂತಿದ್ದ ಕೆಲವು ಜನರು ಇದನ್ನು ಕೇಳಿ, “ನೋಡಿ! ಆತನು ಎಲೀಯನನ್ನು ಕರೆಯುತ್ತಿದ್ದಾನೆ” ಎಂದರು.
ಮಾರ್ಕನು 15 : 36 (ERVKN)
ಅಲ್ಲಿದ್ದ ಒಬ್ಬನು ಓಡಿಹೋಗಿ, ಸ್ಪಂಜನ್ನು ತೆಗೆದುಕೊಂಡು ಅದನ್ನು ಹುಳಿರಸದಿಂದ ತುಂಬಿಸಿ, ಒಂದು ಕೋಲಿಗೆ ಕಟ್ಟಿ ಯೇಸುವಿಗೆ ಕುಡಿಯಲು ಕೊಡುತ್ತಾ, “ಎಲೀಯನು ಇವನನ್ನು ಶಿಲುಬೆಯಿಂದ ಕೆಳಗಿಳಿಸಲು ಬರಬಹುದೇನೋ ನಾವು ಕಾಯ್ದು ನೋಡಬೇಕು” ಎಂದನು.
ಮಾರ್ಕನು 15 : 37 (ERVKN)
ನಂತರ ಯೇಸು ಮಹಾಧ್ವನಿಯಿಂದ ಕೂಗಿ, ಪ್ರಾಣಬಿಟ್ಟನು.
ಮಾರ್ಕನು 15 : 38 (ERVKN)
ಆಗ ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೂ ಎರಡು ಭಾಗಗಳಾಗಿ ಹರಿದುಹೋಯಿತು.
ಮಾರ್ಕನು 15 : 39 (ERVKN)
ಶಿಲುಬೆಯ ಮುಂದೆ ನಿಂತಿದ್ದ ಸೈನ್ಯದ ಅಧಿಕಾರಿಯು ಯೇಸು ಪ್ರಾಣಬಿಟ್ಟಾಗ ನಡೆದದ್ದನ್ನು ನೋಡಿ, “ಈ ಮನುಷ್ಯನು ನಿಜವಾಗಿಯೂ ದೇವರ ಮಗನು” ಎಂದನು.
ಮಾರ್ಕನು 15 : 40 (ERVKN)
ಕೆಲವು ಸ್ತ್ರೀಯರು ಶಿಲುಬೆಯಿಂದ ದೂರದಲ್ಲಿ ನಿಂತುಕೊಂಡು ನೋಡುತ್ತಾ ಇದ್ದರು. ಈ ಸ್ತ್ರೀಯರಲ್ಲಿ ಕೆಲವರೆಂದರೆ, ಮಗ್ದಲದ ಮರಿಯಳು, ಸಲೋಮೆ ಮತ್ತು ಯಾಕೋಬ ಯೋಸೆಯರ ತಾಯಿಯಾದ ಮರಿಯಳು (ಯಾಕೋಬನು ಅವಳ ಕಿರಿಯ ಮಗ.)
ಮಾರ್ಕನು 15 : 41 (ERVKN)
ಈ ಸ್ತ್ರೀಯರು ಗಲಿಲಾಯದಲ್ಲಿ ಯೇಸುವನ್ನು ಹಿಂಬಾಲಿಸಿ ಆತನ ಸೇವೆ ಮಾಡಿದವರು. ಯೇಸುವಿನೊಡನೆ ಜೆರುಸಲೇಮಿಗೆ ಬಂದಿದ್ದ ಇನ್ನೂ ಅನೇಕ ಸ್ತ್ರೀಯರು ಅಲ್ಲಿದ್ದರು.
ಮಾರ್ಕನು 15 : 42 (ERVKN)
ಯೇಸುವಿನ ಸಮಾಧಿ (ಮತ್ತಾಯ 27:57-61; ಲೂಕ 23:50-56; ಯೋಹಾನ 19:38-42) ಆಗ ಕತ್ತಲಾಗತೊಡಗಿತ್ತು. ಅಂದು ಸಿದ್ಧತೆಯ ದಿನವಾಗಿದ್ದರಿಂದ (ಅಂದರೆ ಸಬ್ಬತ್ತಿನ ಹಿಂದಿನ ದಿನ),
ಮಾರ್ಕನು 15 : 43 (ERVKN)
ಅರಿಮಥಾಯ ಊರಿನ ಯೋಸೇಫ ಎಂಬವನು ಪಿಲಾತನ ಬಳಿಗೆ ಹೋಗಿ, ಯೇಸುವಿನ ದೇಹವನ್ನು ತನಗೆ ಕೊಡಬೇಕೆಂದು ಧೈರ್ಯದಿಂದ ಕೇಳಿದನು. ಯೋಸೇಫನು ಯೆಹೂದ್ಯರ ಸಮಿತಿಯಲ್ಲಿ ಒಬ್ಬ ಮುಖ್ಯ ಸದಸ್ಯನಾಗಿದ್ದನು. ದೇವರರಾಜ್ಯ ಬರಲೆಂದು ಬಯಸಿದ ಜನರಲ್ಲಿ ಇವನೂ ಒಬ್ಬನಾಗಿದ್ದನು.
ಮಾರ್ಕನು 15 : 44 (ERVKN)
ಯೇಸು ಇಷ್ಟು ಬೇಗನೆ ಸತ್ತದ್ದನ್ನು ಕೇಳಿ ಪಿಲಾತನಿಗೆ ಆಶ್ಚರ್ಯವಾಯಿತು. ಯೇಸುವನ್ನು ಕಾವಲು ಕಾಯುತ್ತಿದ್ದ ಸೈನ್ಯಾಧಿಕಾರಿಯನ್ನು ಪಿಲಾತನು ಕರೆದು, “ಯೇಸು ಸತ್ತುಹೋದನೇ?” ಎಂದು ಕೇಳಿದನು.
ಮಾರ್ಕನು 15 : 45 (ERVKN)
ಆ ಅಧಿಕಾರಿಯು, “ಹೌದು” ಎಂದು ಹೇಳಿದ್ದರಿಂದ ಆತನ ದೇಹವನ್ನು ತೆಗೆದುಕೊಳ್ಳಲು ಪಿಲಾತನು ಯೋಸೇಫನಿಗೆ ಅಪ್ಪಣೆಕೊಟ್ಟನು.
ಮಾರ್ಕನು 15 : 46 (ERVKN)
ಯೋಸೇಫನು ನಾರುಬಟ್ಟೆಯನ್ನು ತೆಗೆದುಕೊಂಡು ಬಂದು, ಶಿಲುಬೆಯಿಂದ ದೇಹವನ್ನು ಇಳಿಸಿ, ಅದನ್ನು ಆ ಬಟ್ಟೆಯಿಂದ ಸುತ್ತಿದನು. ಅನಂತರ, ಬಂಡೆಯ ಸಮಾಧಿಯಲ್ಲಿ ಅದನ್ನಿರಿಸಿ ಆ ಸಮಾಧಿಯ ಬಾಗಿಲಿಗೆ ದೊಡ್ಡ ಬಂಡೆಯನ್ನು ಉರುಳಿಸಿ ಮುಚ್ಚಿದನು.
ಮಾರ್ಕನು 15 : 47 (ERVKN)
ಮಗ್ದಲದ ಮರಿಯಳು ಹಾಗೂ ಯೋಸೆಯನ ತಾಯಿಯಾದ ಮರಿಯಳು ಸಮಾಧಿ ಮಾಡಿದ ಸ್ಥಳವನ್ನು ಗುರುತಿಸಿಕೊಂಡರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47