ಮತ್ತಾಯನು 8 : 1 (ERVKN)
ಗುಣಮುಖನಾದ ಕುಷ್ಠರೋಗಿ (ಮಾರ್ಕ 1:40-45; 5:12-16) ಯೇಸು ಬೆಟ್ಟದಿಂದ ಕೆಳಗೆ ಇಳಿದು ಬಂದನು. ಜನರು ಗುಂಪುಗುಂಪಾಗಿ ಆತನನ್ನು ಹಿಂಬಾಲಿಸಿದರು.
ಮತ್ತಾಯನು 8 : 2 (ERVKN)
ಆಗ ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದನು. ಅವನು ಯೇಸುವಿನ ಮುಂದೆ ಅಡ್ಡಬಿದ್ದು, “ಪ್ರಭುವೇ, ನೀನು ಇಷ್ಟಪಟ್ಟರೆ ನನ್ನನ್ನು ಗುಣಪಡಿಸಬಲ್ಲೆ” ಎಂದನು.
ಮತ್ತಾಯನು 8 : 3 (ERVKN)
ಯೇಸು ಅವನನ್ನು ಮುಟ್ಟಿ, “ನಿನ್ನನ್ನು ಗುಣಪಡಿಸಲು ನನಗೆ ಮನಸ್ಸಿದೆ, ಗುಣವಾಗು” ಎಂದನು. ಆ ಕ್ಷಣವೇ ಅವನ ಕುಷ್ಠರೋಗ ವಾಸಿಯಾಯಿತು.
ಮತ್ತಾಯನು 8 : 4 (ERVKN)
ಯೇಸು ಅವನಿಗೆ, “ಇದು ಹೇಗಾಯಿತೆಂಬುದನ್ನು ಯಾರಿಗೂ ಹೇಳಬೇಡ. ಈಗ ನೀನು ಹೋಗಿ ಯಾಜಕನಿಗೆ ನಿನ್ನ ಮೈಯನ್ನು ತೋರಿಸು. ಗುಣಹೊಂದಿದವರು ಮೋಶೆಯ ಆಜ್ಞೆಗನುಸಾರವಾಗಿ ಕೊಡತಕ್ಕ ಕಾಣಿಕೆಯನ್ನು ಅರ್ಪಿಸು. ನೀನು ಗುಣವಾದದ್ದಕ್ಕೆ ಅದು ಸಾಕ್ಷಿಯಾಗಿರುವುದು” ಎಂದು ಹೇಳಿದನು.
ಮತ್ತಾಯನು 8 : 5 (ERVKN)
ಆರೋಗ್ಯ ಹೊಂದಿದ ಅಧಿಕಾರಿಯ ಸೇವಕ (ಲೂಕ 7:1-10; ಯೋಹಾನ 4:43-54) ಯೇಸು ಕಪೆರ್ನೌಮ್ ಪಟ್ಟಣಕ್ಕೆ ಹೊರಟುಹೋದನು. ಆತನು ಪಟ್ಟಣಕ್ಕೆ ಪ್ರವೇಶಿಸಿದಾಗ ಸೈನ್ಯದ ಅಧಿಕಾರಿಯೊಬ್ಬನು ಬಂದು,
ಮತ್ತಾಯನು 8 : 6 (ERVKN)
“ಪ್ರಭುವೇ, ನನ್ನ ಸೇವಕನು ಕಾಯಿಲೆಯಿಂದ ಹಾಸಿಗೆಯ ಮೇಲಿದ್ದಾನೆ. ಅವನು ಬಹಳ ನೋವಿನಿಂದ ನರಳುತ್ತಿದ್ದಾನೆ” ಎಂದು ಸಹಾಯಕ್ಕಾಗಿ ಬೇಡಿಕೊಂಡನು.
ಮತ್ತಾಯನು 8 : 7 (ERVKN)
ಯೇಸು ಆ ಅಧಿಕಾರಿಗೆ, “ನಾನು ಬಂದು ಅವನನ್ನು ಗುಣಪಡಿಸುತ್ತೇನೆ” ಎಂದು ಹೇಳಿದನು.
ಮತ್ತಾಯನು 8 : 8 (ERVKN)
ಅದಕ್ಕೆ ಆ ಅಧಿಕಾರಿ, “ಪ್ರಭುವೇ, ನನ್ನ ಮನೆಗೆ ನೀನು ಬರುವಷ್ಟು ಯೋಗ್ಯತೆ ನನಗಿಲ್ಲ. ಅವನಿಗೆ ಗುಣವಾಗಲಿ ಎಂದು ನೀನು ಆಜ್ಞಾಪಿಸಿದರೆ ಸಾಕು, ಅವನಿಗೆ ಗುಣವಾಗುವುದು.
ಮತ್ತಾಯನು 8 : 9 (ERVKN)
ನಾನು ಸಹ ಬೇರೆ ಅಧಿಕಾರಿಗಳ ಅಧೀನದಲ್ಲಿದ್ದೇನೆ. ನನ್ನ ಅಧೀನದಲ್ಲಿ ಸಿಪಾಯಿಗಳಿದ್ದಾರೆ. ನಾನು ಒಬ್ಬ ಸಿಪಾಯಿಗೆ ‘ಹೋಗು’ ಅಂದರೆ ಅವನು ಹೋಗುತ್ತಾನೆ; ಮತ್ತೊಬ್ಬ ಸಿಪಾಯಿಗೆ ‘ಬಾ’ ಅಂದರೆ ಅವನು ಬರುತ್ತಾನೆ. ನಾನು ನನ್ನ ಸೇವಕನಿಗೆ, ‘ಇದನ್ನು ಮಾಡು’ ಅಂದರೆ ಅವನು ವಿಧೇಯತೆಯಿಂದ ಮಾಡುತ್ತಾನೆ. ನಿನಗೂ ಇದೇ ರೀತಿಯ ಅಧಿಕಾರವಿದೆ ಎಂದು ನನಗೆ ಗೊತ್ತಿದೆ” ಎಂದು ಹೇಳಿದನು.
ಮತ್ತಾಯನು 8 : 10 (ERVKN)
ಇದನ್ನು ಕೇಳಿ ಯೇಸುವಿಗೆ ಆಶ್ಚರ್ಯವಾಯಿತು. ಯೇಸು ತನ್ನ ಸಂಗಡ ಇದ್ದವರಿಗೆ, “ನಾನು ಇಸ್ರೇಲಿನಲ್ಲಿಯೂ ಸಹ ಇಷ್ಟು ನಂಬಿಕೆಯುಳ್ಳ ವ್ಯಕ್ತಿಯನ್ನು ಕಾಣಲಿಲ್ಲ ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಎಂದನು.
ಮತ್ತಾಯನು 8 : 11 (ERVKN)
ಅನೇಕ ಜನರು ಪೂರ್ವ ಮತ್ತು ಪಶ್ಚಿಮ ದಿಕ್ಕುಗಳಿಂದ ಬರುತ್ತಾರೆ. ಅವರು ಪರಲೋಕರಾಜ್ಯದಲ್ಲಿ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂಗಡ ಕುಳಿತುಕೊಂಡು ಊಟಮಾಡುತ್ತಾರೆ.
ಮತ್ತಾಯನು 8 : 12 (ERVKN)
ಪರಲೋಕರಾಜ್ಯವನ್ನು ಹೊಂದತಕ್ಕವರು ಹೊರಗೆ ಕತ್ತಲೆಗೆ ಎಸೆಯಲ್ಪಡುವರು. ಅಲ್ಲಿ ಅವರು ಗೋಳಾಡುವರು ಮತ್ತು ನೋವಿನಿಂದ ಹಲ್ಲುಗಳನ್ನು ಕಡಿಯುವರು” ಎಂದನು.
ಮತ್ತಾಯನು 8 : 13 (ERVKN)
ಬಳಿಕ ಯೇಸು ಆ ಅಧಿಕಾರಿಗೆ, “ಮನೆಗೆ ಹೋಗು, ನೀನು ನಂಬಿದಂತೆಯೇ ನಿನ್ನ ಸೇವಕನಿಗೆ ಗುಣವಾಗುವುದು” ಎಂದನು. ಅದೇ ಸಮಯದಲ್ಲಿ ಅವನ ಸೇವಕನಿಗೆ ಗುಣವಾಯಿತು.
ಮತ್ತಾಯನು 8 : 14 (ERVKN)
ಗುಣಮುಖರಾದ ವಿವಿಧ ಜನರು (ಮಾರ್ಕ 1:29-34; ಲೂಕ 4:38-41) ಯೇಸುವು ಪೇತ್ರನ ಮನೆಗೆ ಹೋದನು. ಅಲ್ಲಿ ಪೇತ್ರನ ಅತ್ತೆಯು ಬಹಳ ಜ್ವರದಿಂದ ಹಾಸಿಗೆಯಲ್ಲಿ ಮಲಗಿದ್ದನ್ನು ಯೇಸು ನೋಡಿದನು.
ಮತ್ತಾಯನು 8 : 15 (ERVKN)
ಯೇಸು ಅವಳ ಕೈ ಮುಟ್ಟಿದಾಗ ಜ್ವರವು ಅವಳನ್ನು ಬಿಟ್ಟುಹೋಯಿತು. ಆಗ ಅವಳು ಮೇಲೆದ್ದು, ಆತನ ಸೇವೆಮಾಡಿದಳು.
ಮತ್ತಾಯನು 8 : 16 (ERVKN)
ಅಂದು ಸಾಯಂಕಾಲ ಜನರು ದೆವ್ವದಿಂದ ಪೀಡಿತರಾಗಿದ್ದ ಅನೇಕರನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದರು. ಯೇಸುವು ಮಾತಿನಿಂದಲೇ ದೆವ್ವಗಳನ್ನು ಅವರಿಂದ ಓಡಿಸಿದನು; ಕಾಯಿಲೆಯಾಗಿದ್ದ ಜನರೆಲ್ಲರನ್ನೂ ಗುಣಪಡಿಸಿದನು.
ಮತ್ತಾಯನು 8 : 17 (ERVKN)
“ಆತನು ನಮ್ಮ ಬೇನೆಗಳನ್ನು ತೆಗೆದುಕೊಂಡನು, ನಮ್ಮ ರೋಗಗಳನ್ನು ಹೊತ್ತುಕೊಂಡನು” ಯೆಶಾಯ 53:4 ಎಂದು ಪ್ರವಾದಿಯಾದ ಯೆಶಾಯನು ಹೇಳಿದ್ದು ಇದರ ಮೂಲಕ ನೆರವೇರಿತು.
ಮತ್ತಾಯನು 8 : 18 (ERVKN)
ಯೇಸುವನ್ನು ಹಿಂಬಾಲಿಸಿ (ಲೂಕ 9:57-62) ಯೇಸು ತನ್ನ ಸುತ್ತಲೂ ಇದ್ದ ಜನರೆಲ್ಲರನ್ನು ನೋಡಿ ತನ್ನ ಶಿಷ್ಯರಿಗೆ ಸರೋವರದ ಆಚೆಯ ತೀರಕ್ಕೆ ಹೋಗುವಂತೆ ಹೇಳಿದನು.
ಮತ್ತಾಯನು 8 : 19 (ERVKN)
ಆಗ ಧರ್ಮೋಪದೇಶಕನು ಯೇಸುವಿನ ಬಳಿಗೆ ಬಂದು, “ಬೋಧಕನೇ, ನೀನು ಯಾವ ಸ್ಥಳಕ್ಕೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುತ್ತೇನೆ” ಎಂದನು.
ಮತ್ತಾಯನು 8 : 20 (ERVKN)
ಯೇಸು ಅವನಿಗೆ, “ನರಿಗಳಿಗೆ ಗುಹೆಗಳಿವೆ, ಪಕ್ಷಿಗಳಿಗೆ ಗೂಡುಗಳಿವೆ. ಆದರೆ ಮನುಷ್ಯಕುಮಾರನಿಗೆ ತಲೆ ಇಡುವಷ್ಟು ಸ್ಥಳವೂ ಇಲ್ಲ” ಅಂದನು.
ಮತ್ತಾಯನು 8 : 21 (ERVKN)
ಶಿಷ್ಯರಲ್ಲಿ ಒಬ್ಬನು ಯೇಸುವಿಗೆ, “ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿಬರಲು ನನಗೆ ಅಪ್ಪಣೆಯಾಗಲಿ. ಆಮೇಲೆ ನಾನು ನಿನ್ನನ್ನು ಹಿಂಬಾಲಿಸುತ್ತೇನೆ” ಎಂದು ಹೇಳಿದನು.
ಮತ್ತಾಯನು 8 : 22 (ERVKN)
ಆದರೆ ಯೇಸು ಅವನಿಗೆ, “ಸತ್ತವರೇ ತಮ್ಮಲ್ಲಿ ಸತ್ತುಹೋದವರ ಉತ್ತರಕ್ರಿಯೆಗಳನ್ನು ಮಾಡಿಕೊಳ್ಳಲಿ. ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.
ಮತ್ತಾಯನು 8 : 23 (ERVKN)
ಯೇಸುವಿನ ಆಜ್ಞೆಗೆ ಬಿರುಗಾಳಿಯ ವಿಧೇಯತೆ (ಮಾರ್ಕ 4:35-41; ಲೂಕ 8:22-25) ಯೇಸು ದೋಣಿಯೊಳಗೆ ಹೋದನು. ಆತನ ಶಿಷ್ಯರೂ ಆತನೊಂದಿಗೆ ಹೋದರು.
ಮತ್ತಾಯನು 8 : 24 (ERVKN)
ದೋಣಿಯು ದಡವನ್ನು ಬಿಟ್ಟಮೇಲೆ ದೊಡ್ಡ ಬಿರುಗಾಳಿಯು ಸರೋವರದ ಮೇಲೆ ಪ್ರಾರಂಭವಾಯಿತು. ಅಲೆಗಳು ದೋಣಿಯನ್ನು ಮುಚ್ಚಿಕೊಂಡವು. ಆದರೆ ಯೇಸು ನಿದ್ರಿಸುತ್ತಿದ್ದನು.
ಮತ್ತಾಯನು 8 : 25 (ERVKN)
ಯೇಸುವಿನ ಶಿಷ್ಯರು ಆತನ ಬಳಿಗೆ ಹೋಗಿ ಆತನನ್ನು ಎಬ್ಬಿಸಿ, “ಪ್ರಭುವೇ, ನಮ್ಮನ್ನು ರಕ್ಷಿಸು! ನಾವು ಮುಳುಗುತ್ತಿದ್ದೇವೆ!” ಎಂದು ಹೇಳಿದರು.
ಮತ್ತಾಯನು 8 : 26 (ERVKN)
ಯೇಸು, “ನೀವು ಭಯಪಡುವುದೇಕೆ? ನಿಮ್ಮಲ್ಲಿ ಸಾಕಷ್ಟು ನಂಬಿಕೆಯಿಲ್ಲ” ಎಂದು ಉತ್ತರಿಸಿ ಎದ್ದುನಿಂತುಕೊಂಡು ಆ ದೊಡ್ಡ ಬಿರುಗಾಳಿಗೂ ಅಲೆಗಳಿಗೂ ಆಜ್ಞಾಪಿಸಿದನು. ಆ ಕೂಡಲೇ ಬಿರುಗಾಳಿ ನಿಂತುಹೋಯಿತು. ಸರೋವರ ಪ್ರಶಾಂತವಾಯಿತು.
ಮತ್ತಾಯನು 8 : 27 (ERVKN)
ಜನರೆಲ್ಲರೂ ಆಶ್ಚರ್ಯಪಟ್ಟರು. “ಈತನು ಎಂತಹ ಮನುಷ್ಯ? ಬಿರುಗಾಳಿ ಮತ್ತು ನೀರು ಈತನಿಗೆ ವಿಧೇಯವಾಗುತ್ತವೆಯಲ್ಲಾ” ಎಂದು ಮಾತಾಡಿಕೊಂಡರು.
ಮತ್ತಾಯನು 8 : 28 (ERVKN)
ದೆವ್ವದಿಂದ ಪೀಡಿತರಾಗಿದ್ದ ಇಬ್ಬರಿಗೆ ಬಿಡುಗಡೆ (ಮಾರ್ಕ 5:1-20; ಲೂಕ 8:26-39) ಯೇಸು ಸರೋವರದ ಮತ್ತೊಂದು ತೀರದಲ್ಲಿದ್ದ ಗದರೇನ ಪ್ರಾಂತ್ಯಕ್ಕೆ ಬಂದನು. ಅಲ್ಲಿ ದೆವ್ವಗಳಿಂದ ಪೀಡಿತರಾಗಿದ್ದ ಇಬ್ಬರು ಯೇಸುವಿನ ಬಳಿಗೆ ಬಂದರು. ಅವರು ಸಮಾಧಿಯ ಗವಿಗಳಲ್ಲಿ ವಾಸವಾಗಿದ್ದರು ಮತ್ತು ಬಹಳ ಅಪಾಯಕಾರಿಗಳಾಗಿದ್ದರು. ಆದ್ದರಿಂದ ಜನರು ಆ ಮಾರ್ಗದಲ್ಲಿ ಹೋಗುತ್ತಿರಲಿಲ್ಲ.
ಮತ್ತಾಯನು 8 : 29 (ERVKN)
ಅವರಿಬ್ಬರು ಯೇಸುವಿನ ಬಳಿಗೆ ಬಂದು. “ನೀನು ನಮಗೆ ಏನು ಮಾಡಬೇಕೆಂದಿರುವೆ? ದೇವಕುಮಾರನೇ, ನೇಮಿತ ಕಾಲಕ್ಕಿಂತ ಮುಂಚೆಯೇ ನಮ್ಮನ್ನು ಶಿಕ್ಷಿಸಲು ಇಲ್ಲಿಗೆ ಬಂದೆಯಾ?” ಎಂದು ಗಟ್ಟಿಯಾಗಿ ಕೂಗಿಕೊಂಡರು.
ಮತ್ತಾಯನು 8 : 30 (ERVKN)
ಆ ಸ್ಥಳದ ಹತ್ತಿರ ಹಂದಿಗಳ ದೊಡ್ಡ ಗುಂಪು ಮೇಯುತ್ತಿತ್ತು.
ಮತ್ತಾಯನು 8 : 31 (ERVKN)
ಆ ದೆವ್ವಗಳು, “ನಾವು ಇವರಿಬ್ಬರನ್ನು ಬಿಟ್ಟುಹೋಗುವಂತೆ ನೀನು ಮಾಡಬೇಕೆಂದಿದ್ದರೆ, ದಯವಿಟ್ಟು ನಮ್ಮನ್ನು ಆ ಹಂದಿಗಳೊಳಗೆ ಕಳುಹಿಸು” ಎಂದು ಬೇಡಿಕೊಂಡವು.
ಮತ್ತಾಯನು 8 : 32 (ERVKN)
ಯೇಸು ಅವುಗಳಿಗೆ, “ಹೋಗಿ” ಅಂದನು. ಆಗ ಆ ದೆವ್ವಗಳು ಅವರಿಬ್ಬರನ್ನು ಬಿಟ್ಟು ಹಂದಿಗಳೊಳಗೆ ಹೋದವು. ಕೂಡಲೇ ಹಂದಿಗಳೆಲ್ಲಾ ಗುಡ್ಡದ ಕೆಳಗೆ ಓಡಿ ಸರೋವರದಲ್ಲಿ ಬಿದ್ದು ನೀರಿನಲ್ಲಿ ಮುಳುಗಿಹೋದವು.
ಮತ್ತಾಯನು 8 : 33 (ERVKN)
ಹಂದಿಗಳನ್ನು ಮೇಯಿಸುತ್ತಿದ್ದವರು ಪಟ್ಟಣದೊಳಕ್ಕೆ ಓಡಿಹೋಗಿ ಹಂದಿಗಳಿಗೂ ದೆವ್ವಗಳಿಂದ ಪೀಡಿತರಾಗಿದ್ದವರಿಗೂ ಸಂಭವಿಸಿದ್ದನ್ನು ಜನರಿಗೆ ತಿಳಿಸಿದರು.
ಮತ್ತಾಯನು 8 : 34 (ERVKN)
ಆಗ ಪಟ್ಟಣದ ಜನರೆಲ್ಲರೂ ಯೇಸುವನ್ನು ನೋಡಲು ಹೋಗಿ, ತಮ್ಮ ಸ್ಥಳವನ್ನು ಬಿಟ್ಟುಹೋಗಬೇಕೆಂದು ಆತನನ್ನು ಬೇಡಿಕೊಂಡರು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34