ಪ್ರಕಟನೆ 15 : 1 (ERVKN)
ದೇವದೂತರಿಂದ ಕೊನೆಯ ಉಪದ್ರವಗಳು ನಂತರ ಪರಲೋಕದಲ್ಲಿ ಮತ್ತೊಂದು ಅದ್ಭುತವನ್ನು ನಾನು ನೋಡಿದೆನು. ಅದು ಮಹಾ ಆಶ್ಚರ್ಯಕರವಾಗಿತ್ತು. ಏಳು ಉಪದ್ರವಗಳನ್ನು ತರುವ ಏಳು ಮಂದಿ ದೇವದೂತರು ಅಲ್ಲಿದ್ದರು. ದೇವರ ಕೋಪವು ಈ ಉಪದ್ರವಗಳೊಂದಿಗೆ ಮುಗಿಯುತ್ತಿದ್ದುದರಿಂದ ಇವು ಕಡೆಯ ಉಪದ್ರವಗಳಾಗಿದ್ದವು.
ಪ್ರಕಟನೆ 15 : 2 (ERVKN)
ಬೆಂಕಿಯನ್ನು ಬೆರಸಿದ ಗಾಜಿನ ಸಮುದ್ರದಂತೆ ಕಾಣಿಸುವ ಏನೋ ಒಂದು ನನಗೆ ಕಾಣಿಸಿತು. ಮೃಗವನ್ನು, ಅದರ ವಿಗ್ರಹವನ್ನು ಮತ್ತು ಅದರ ಹೆಸರಿನ ಸಂಖ್ಯೆಯನ್ನು ಸೋಲಿಸಿ ಜಯಗಳಿಸಿದವರೆಲ್ಲರೂ ಸಮುದ್ರ ತೀರದಲ್ಲಿ ನಿಂತಿದ್ದರು. ದೇವರು ಅವರಿಗೆ ನೀಡಿದ ತಂತಿವಾದ್ಯಗಳು ಅವರಲ್ಲಿದ್ದವು.
ಪ್ರಕಟನೆ 15 : 3 (ERVKN)
ಅವರು ದೇವರ ಸೇವಕನಾದ ಮೋಶೆಯ ಗೀತೆಯನ್ನು ಮತ್ತು ಕುರಿಮರಿಯಾದಾತನ ಗೀತೆಯನ್ನು ಹಾಡಿದರು: “ಪ್ರಭುವೇ, ಸರ್ವಶಕ್ತನಾದ ದೇವರೇ, ನೀನು ಮಹತ್ತಾದ ಕಾರ್ಯಗಳನ್ನೂ ಆಶ್ಚರ್ಯಕರವಾದ ಕಾರ್ಯಗಳನ್ನೂ ಮಾಡುವೆ.
ಸರ್ವಜನಾಂಗಗಳ ರಾಜನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.
ಪ್ರಕಟನೆ 15 : 4 (ERVKN)
ಪ್ರಭುವೇ, ಜನರೆಲ್ಲರೂ ನಿನಗೆ ಭಯಗೊಳ್ಳುತ್ತಾರೆ;
ಜನರೆಲ್ಲರೂ ನಿನ್ನ ಹೆಸರನ್ನು ಸ್ತುತಿಸುತ್ತಾರೆ. ನೀನು ಮಾತ್ರ ಪರಿಶುದ್ಧನಾದವನು.
ನೀನು ಯೋಗ್ಯವಾದ ಕಾರ್ಯಗಳನ್ನು ಮಾಡುತ್ತೀ ಎಂಬುದು ಸ್ಪಷ್ಟವಾಗಿರುವುದರಿಂದ ಜನರೆಲ್ಲರೂ ನಿನ್ನ ಸನ್ನಿಧಿಗೆ ಬಂದು ನಿನ್ನನ್ನು ಆರಾಧಿಸುತ್ತಾರೆ.”
ಪ್ರಕಟನೆ 15 : 5 (ERVKN)
ಇದಾದ ನಂತರ ನಾನು ನೋಡಿದಾಗ ಪರಲೋಕದ ಆಲಯವು (ದೇವದರ್ಶನ ಗುಡಾರವು) ತೆರೆಯಿತು.
ಪ್ರಕಟನೆ 15 : 6 (ERVKN)
ಏಳು ಉಪದ್ರವಗಳನ್ನು ತರುವ ಏಳು ಮಂದಿ ದೇವದೂತರು ಆಲಯದಿಂದ ಹೊರಗೆ ಬಂದರು. ಅವರು ಶುಭ್ರವಾದ ಮತ್ತು ಪ್ರಕಾಶಮಾನವಾದ ನಾರುಮಡಿಯನ್ನು ಧರಿಸಿದ್ದರು. ಅವರು ಎದೆಯ ಸುತ್ತಲೂ ಚಿನ್ನದ ಪಟ್ಟಿಗಳನ್ನು ಕಟ್ಟಿಕೊಂಡಿದ್ದರು.
ಪ್ರಕಟನೆ 15 : 7 (ERVKN)
ನಾಲ್ಕು ಜೀವಿಗಳಲ್ಲಿ ಒಂದು ಜೀವಿ ಈ ಏಳು ದೇವದೂತರಿಗೆ ಏಳು ಚಿನ್ನದ ಪಾತ್ರೆಗಳನ್ನು ನೀಡಿತು. ಈ ಪಾತ್ರೆಗಳು ಯುಗಯುಗಾಂತರಗಳಲ್ಲಿಯೂ ಜೀವಿಸುವ ದೇವರ ಕೋಪದಿಂದ ತುಂಬಿದ್ದವು.
ಪ್ರಕಟನೆ 15 : 8 (ERVKN)
ದೇವರ ವೈಭವ ಮತ್ತು ಶಕ್ತಿಯ ಹೊಗೆಯಿಂದ ಆಲಯವು ತುಂಬಿಹೋಯಿತು. ಏಳು ದೇವದೂತರ ಏಳು ಉಪದ್ರವಗಳು ಮುಗಿಯುವ ತನಕ ಆಲಯದಲ್ಲಿ ಪ್ರವೇಶಿಸಲು ಯಾರಿಗೂ ಸಾಧ್ಯವಿರಲಿಲ್ಲ.
❮
❯
1
2
3
4
5
6
7
8