ಙ್ಞಾನೋಕ್ತಿಗಳು 3 : 1 (IRVKN)
ಯೆಹೋವನಲ್ಲಿ ಭರವಸವಿಡು ಕಂದಾ, ನನ್ನ ಉಪದೇಶವನ್ನು ಮರೆಯಬೇಡ, ನನ್ನ ಆಜ್ಞೆಗಳನ್ನು ಮನಃಪೂರ್ವಕವಾಗಿ ಕೈಗೊಳ್ಳು.
ಙ್ಞಾನೋಕ್ತಿಗಳು 3 : 2 (IRVKN)
ಅವು ನಿನ್ನ ದಿನಗಳನ್ನು ಹೆಚ್ಚಿಸಿ, ನಿನ್ನ ಆಯುಷ್ಯವನ್ನು ವೃದ್ಧಿಗೊಳಿಸಿ, ನಿನಗೆ ಸುಕ್ಷೇಮವನ್ನು ಉಂಟುಮಾಡುವವು.
ಙ್ಞಾನೋಕ್ತಿಗಳು 3 : 3 (IRVKN)
ಪ್ರೀತಿ, ಸತ್ಯತೆಗಳು ನಿನ್ನನ್ನು ಬಿಡದಿರಲಿ, ಅವುಗಳನ್ನು ನಿನ್ನ ಕೊರಳಿಗೆ ಕಟ್ಟು, ನಿನ್ನ ಹೃದಯದ ಹಲಗೆಯ ಮೇಲೆ ಅವುಗಳನ್ನು ಬರೆ.
ಙ್ಞಾನೋಕ್ತಿಗಳು 3 : 4 (IRVKN)
ಇದರಿಂದ ನೀನು ದೇವರ ಮತ್ತು ಮನುಷ್ಯರ ದಯೆಯನ್ನೂ, ಸಮ್ಮತಿಯನ್ನೂ ಪಡೆದುಕೊಳ್ಳುವಿ.
ಙ್ಞಾನೋಕ್ತಿಗಳು 3 : 5 (IRVKN)
ಸ್ವಬುದ್ಧಿಯನ್ನೇ ಆಧಾರಮಾಡಿಕೊಳ್ಳದೆ ಪೂರ್ಣಮನಸ್ಸಿನಿಂದ ಯೆಹೋವನಲ್ಲಿ ಭರವಸವಿಡು.
ಙ್ಞಾನೋಕ್ತಿಗಳು 3 : 6 (IRVKN)
ನಿನ್ನ ಎಲ್ಲಾ ನಡವಳಿಕೆಯಲ್ಲಿ ಆತನ ಚಿತ್ತಕ್ಕೆ ವಿಧೇಯನಾಗಿರು; ಆತನೇ ನಿನ್ನ ಮಾರ್ಗಗಳನ್ನು ಸರಾಗಮಾಡುವನು.
ಙ್ಞಾನೋಕ್ತಿಗಳು 3 : 7 (IRVKN)
ನೀನೇ ಬುದ್ಧಿವಂತನು ಎಂದೆಣಿಸದೆ, ಯೆಹೋವನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು.
ಙ್ಞಾನೋಕ್ತಿಗಳು 3 : 8 (IRVKN)
ಇದರಿಂದ ನಿನ್ನ ದೇಹಕ್ಕೆ ಆರೋಗ್ಯವೂ, ಎಲುಬುಗಳಿಗೆ ಸಾರವೂ ಉಂಟಾಗುವವು.
ಙ್ಞಾನೋಕ್ತಿಗಳು 3 : 9 (IRVKN)
ನಿನ್ನ ಆದಾಯದಿಂದಲೂ, ಬೆಳೆಯ ಪ್ರಥಮಫಲದಿಂದಲೂ ಯೆಹೋವನನ್ನು ಸನ್ಮಾನಿಸು.
ಙ್ಞಾನೋಕ್ತಿಗಳು 3 : 10 (IRVKN)
ಹೀಗೆ ಮಾಡಿದರೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬುವವು, ತೊಟ್ಟಿಗಳಲ್ಲಿ ದ್ರಾಕ್ಷಾರಸವು ತುಂಬಿ ತುಳುಕುವುದು.
ಙ್ಞಾನೋಕ್ತಿಗಳು 3 : 11 (IRVKN)
ಮಗನೇ, ಯೆಹೋವನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ. ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.
ಙ್ಞಾನೋಕ್ತಿಗಳು 3 : 12 (IRVKN)
ತಂದೆಯು ತನ್ನ ಮುದ್ದುಮಗನನ್ನು ಗದರಿಸುವಂತೆ ಯೆಹೋವನು ತಾನು ಪ್ರೀತಿಸುವವನನ್ನೇ ಗದರಿಸುತ್ತಾನೆ.
ಙ್ಞಾನೋಕ್ತಿಗಳು 3 : 13 (IRVKN)
ಜ್ಞಾನವನ್ನು ಪಡೆಯುವವನು ಧನ್ಯನು, ವಿವೇಕವನ್ನು ಸಂಪಾದಿಸುವವನು ಭಾಗ್ಯವಂತನು.
ಙ್ಞಾನೋಕ್ತಿಗಳು 3 : 14 (IRVKN)
ಅದರ ಲಾಭವು ಬೆಳ್ಳಿಯ ಲಾಭಕ್ಕಿಂತಲೂ, ಅದರಿಂದಾಗುವ ಆದಾಯವು ಬಂಗಾರಕ್ಕಿಂತಲೂ ಅಮೂಲ್ಯವೇ ಸರಿ.
ಙ್ಞಾನೋಕ್ತಿಗಳು 3 : 15 (IRVKN)
ಅದರ ಬೆಲೆಯು ಹವಳಕ್ಕಿಂತಲೂ ಹೆಚ್ಚು, ನಿನ್ನ ಇಷ್ಟವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ.
ಙ್ಞಾನೋಕ್ತಿಗಳು 3 : 16 (IRVKN)
ಜ್ಞಾನವೆಂಬಾಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ, ಎಡಗೈಯಲ್ಲಿ ಧನವೂ, ಘನತೆಯೂ ಉಂಟು.
ಙ್ಞಾನೋಕ್ತಿಗಳು 3 : 17 (IRVKN)
ಆಕೆಯ ದಾರಿಗಳು ಸುಖಕರವಾಗಿವೆ, ಆಕೆಯ ಮಾರ್ಗಗಳೆಲ್ಲಾ ಸಮಾಧಾನವೇ.
ಙ್ಞಾನೋಕ್ತಿಗಳು 3 : 18 (IRVKN)
ಜ್ಞಾನವು ತನ್ನನ್ನು ಹಿಡಿದುಕೊಳ್ಳುವವರಿಗೆ ಜೀವವೃಕ್ಷವಾಗಿದೆ. ಅದನ್ನು ಅವಲಂಬಿಸುವ ಪ್ರತಿಯೊಬ್ಬನೂ ಧನ್ಯನು.
ಙ್ಞಾನೋಕ್ತಿಗಳು 3 : 19 (IRVKN)
ಯೆಹೋವನು ಜ್ಞಾನದ ಮೂಲಕ ಭೂಮಿಯನ್ನು ಸ್ಥಾಪಿಸಿ, ವಿವೇಕದ ಮುಖಾಂತರ ಆಕಾಶಮಂಡಲವನ್ನು ಸ್ಥಿರಪಡಿಸಿದನು.
ಙ್ಞಾನೋಕ್ತಿಗಳು 3 : 20 (IRVKN)
ಭೂಮಿಯ ಕೆಳಗಿನ ಸಾಗರವು ಒಡೆದದ್ದಕ್ಕೂ, ಆಕಾಶವು ಇಬ್ಬನಿಯನ್ನು ಸುರಿಸುವುದಕ್ಕೂ ಆತನ ತಿಳಿವಳಿಕೆಯೇ ಸಾಧನ.
ಙ್ಞಾನೋಕ್ತಿಗಳು 3 : 21 (IRVKN)
ನನ್ನ ಮಗನೇ, ಸುಜ್ಞಾನವನ್ನೂ ಮತ್ತು ಬುದ್ಧಿಯನ್ನೂ ಭದ್ರವಾಗಿಟ್ಟುಕೋ, ನಿನ್ನ ದೃಷ್ಟಿಯು ಅವುಗಳ ಮೇಲೆ ತಪ್ಪದೇ ಇರಲಿ.
ಙ್ಞಾನೋಕ್ತಿಗಳು 3 : 22 (IRVKN)
ಅವು ನಿನಗೆ ಜೀವವೂ, ನಿನ್ನ ಕೊರಳಿಗೆ ಭೂಷಣವೂ ಆಗಿರುವವು.
ಙ್ಞಾನೋಕ್ತಿಗಳು 3 : 23 (IRVKN)
ಆಗ ನೀನು ಎಡವದೆ ನಿನ್ನ ಮಾರ್ಗದಲ್ಲಿ ನಿರ್ಭಯವಾಗಿ ನಡೆಯುವಿ.
ಙ್ಞಾನೋಕ್ತಿಗಳು 3 : 24 (IRVKN)
ನೀನು ಮಲಗುವಾಗ ಹೆದರಿಕೆ ಇರುವುದಿಲ್ಲ, ಮಲಗಿದ ಮೇಲೆ ಸುಖವಾಗಿ ನಿದ್ರೆಮಾಡುವಿ.
ಙ್ಞಾನೋಕ್ತಿಗಳು 3 : 25 (IRVKN)
ಪಕ್ಕನೆ ಬರುವ ಅಪಾಯಕ್ಕಾಗಲಿ ಅಥವಾ ದುಷ್ಟರಿಗೆ ಸಂಭವಿಸುವ ನಾಶನಕ್ಕಾಗಲಿ ನೀನು ಅಂಜುವುದೇ ಇಲ್ಲ.
ಙ್ಞಾನೋಕ್ತಿಗಳು 3 : 26 (IRVKN)
ಯೆಹೋವನು ನಿನ್ನ ಭರವಸಕ್ಕೆ ಆಧಾರನಾಗಿದ್ದು, ನಿನ್ನ ಕಾಲು ಮೋಸದ ಬಲೆಗೆ ಸಿಕ್ಕದಂತೆ ನಿನ್ನನ್ನು ಕಾಪಾಡುವನು.
ಙ್ಞಾನೋಕ್ತಿಗಳು 3 : 27 (IRVKN)
ಉಪಕಾರಮಾಡುವುದಕ್ಕೆ ನಿನ್ನಿಂದ ಸಾಧ್ಯವಾಗುವಾಗ ಹೊಂದತಕ್ಕವರಿಗೆ ಅದನ್ನು ತಪ್ಪಿಸಬೇಡ.
ಙ್ಞಾನೋಕ್ತಿಗಳು 3 : 28 (IRVKN)
ಕೊಡತಕ್ಕದ್ದು ನಿನ್ನಲ್ಲಿದ್ದರೆ ನೆರೆಯವನಿಗೆ, “ಹೋಗಿ ಬಾ, ನಾಳೆ ಕೊಡುತ್ತೇನೆ” ಎಂದು ಹೇಳಬೇಡ.
ಙ್ಞಾನೋಕ್ತಿಗಳು 3 : 29 (IRVKN)
ನೆರೆಯವನಿಗೆ ಕೇಡನ್ನು ಕಲ್ಪಿಸಬಾರದು, ಅವನು ನಿನ್ನ ಪಕ್ಕದಲ್ಲಿ ನಂಬಿಕೆಯಿಂದ ವಾಸಮಾಡುತ್ತಾನಲ್ಲವೇ?
ಙ್ಞಾನೋಕ್ತಿಗಳು 3 : 30 (IRVKN)
ನಿನಗೆ ಅಪಕಾರ ಮಾಡದವನ ಸಂಗಡ ಸುಮ್ಮನೆ ಜಗಳವಾಡಬೇಡ.
ಙ್ಞಾನೋಕ್ತಿಗಳು 3 : 31 (IRVKN)
ಬಲಾತ್ಕಾರಿಯನ್ನು ನೋಡಿ ಹೊಟ್ಟೆಕಿಚ್ಚುಪಡದಿರು, ಅವನ ನಡತೆಯನ್ನು ಎಷ್ಟು ಮಾತ್ರಕ್ಕೂ ಅನುಸರಿಸಬೇಡ.
ಙ್ಞಾನೋಕ್ತಿಗಳು 3 : 32 (IRVKN)
ವಕ್ರಬುದ್ಧಿಯವನು ಯೆಹೋವನಿಗೆ ಅಸಹ್ಯನು, ಯಥಾರ್ಥರಿಗೆ ಆತನ ಸ್ನೇಹವು ದೊರೆಯುವುದು.
ಙ್ಞಾನೋಕ್ತಿಗಳು 3 : 33 (IRVKN)
ಯೆಹೋವನು ದುಷ್ಟನ ಮನೆಯನ್ನು ಶಪಿಸುವನು, ನೀತಿವಂತರ ನಿವಾಸವನ್ನೋ ಆಶೀರ್ವದಿಸುವನು.
ಙ್ಞಾನೋಕ್ತಿಗಳು 3 : 34 (IRVKN)
ಯಾರು ಧರ್ಮವನ್ನು ತಿರಸ್ಕರಿಸುವರೋ ಅವರನ್ನು ಆತನು ತಿರಸ್ಕರಿಸುವನು. ದೀನರಿಗಾದರೋ ತನ್ನ ಕೃಪೆಯನ್ನು ಅನುಗ್ರಹಿಸುವನು.
ಙ್ಞಾನೋಕ್ತಿಗಳು 3 : 35 (IRVKN)
ಜ್ಞಾನವಂತರು ಸನ್ಮಾನಕ್ಕೆ ಬಾಧ್ಯರಾಗುವರು, ಜ್ಞಾನಹೀನರಿಗಾಗುವ ಬಹುಮಾನವು ಅವಮಾನವೇ.
❮
❯